ಸಿಎಂ ಕಾರ್ಯಕ್ರಮ ವ್ಯವಸ್ಥೆ ಅಚ್ಚುಕಟ್ಟಾಗಿರಲಿ

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀರೂಪಾ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಗಣೇಶ್ ಪ್ರಸಾದ್, ದಿನೇಶ್ ಕುಮಾರ್ ಮೀನಾ, ಎಂ.ಎಸ್.ತನ್ಮಯಿ, ಮೋನಾರೋತ್, ಮುತ್ತುರಾಜ್, ಸ್ನೇಹಾರಾಜ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಶ್ರೀರೂಪಾ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಗಣೇಶ್ ಪ್ರಸಾದ್, ದಿನೇಶ್ ಕುಮಾರ್ ಮೀನಾ, ಎಂ.ಎಸ್.ತನ್ಮಯಿ, ಮೋನಾರೋತ್, ಮುತ್ತುರಾಜ್, ಸ್ನೇಹಾರಾಜ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸುಚನೆ
ಗುಂಡ್ಲುಪೇಟೆ: ನಾನಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಏ.21ರಂದು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಮುಖ್ಯಮಂತ್ರಿಗಳು ಬರುತ್ತಿರುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳು ಸಿದ್ಧರಾಗಿರಬೇಕು. ಕಾರ್ಯಕ್ರಮಕ್ಕೆ ಸಚಿವರಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೋಳಿ, ದಿನೇಶ್ ಗುಂಡೂರಾವ್, ಕೆ.ವೆಂಕಟೇಶ್ ಹಾಗೂ ಶಿವಾನಂದ ಪಾಟೀಲ್ ಅವರನ್ನು ಆಹ್ವಾನಿಸಲಾಗಿದೆ. ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿಸುವುದಿದ್ದರೆ ಮುಂಚಿತವಾಗಿ ತಿಳಿಸಬೇಕು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ವಾಹನ ನಿಲುಗಡೆ, ಕುಡಿಯುವ ನೀರು, ಕುಳಿತುಕೊಳ್ಳಲು ವೇದಿಕೆ ಬಳಿ ಆಸನ ವ್ಯವಸ್ಥೆ ಹಾಗೂ ಮಧ್ಯಾಹ್ನ ಉಪಹಾರ ವ್ಯವಸ್ಥೆಯನ್ನು ಶಿಸ್ತಾಗಿ ನೋಡಿಕೊಳ್ಳಬೇಕಾಗಿದೆ ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ನಿಗಮ ಮಂಡಳಿಗಳಲ್ಲಿ ಸವಲತ್ತು ಪಡೆದಿರುವ ಫಲಾನುಭವಿಗಳ ಪಟ್ಟಿ ಇದ್ದರೆ ಮುಖ್ಯಮಂತ್ರಿಗಳ ಕೈಯಿಂದ ವಿತರಣೆ ಮಾಡಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಭವನದ ಎದುರು ಹೆಲಿಪ್ಯಾಡ್ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳ, ಲೋಕಾರ್ಪಣೆಗೊಳ್ಳಲಿರುವ ವಾಲ್ಮೀಕಿ ಭವನ, ಕಾರ್ಯಕ್ರಮ ನಡೆಯುವ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದರು. ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಸೀಲ್ದಾರ್ ಎಂ.ಎಸ್.ತನ್ಮಯಿ, ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಡಿವೈಎಸ್‌ಪಿ ಸ್ನೇಹಾರಾಜ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ, ಲೋಕೋಪಯೋಗಿ ಇಲಾಖೆಯ ಎಇಇ ಎನ್. ರವಿಕುಮಾರ್, ಸೆಸ್ಕ್ ಎಇಇ ಕೆ.ಎಂ.ಸಿದ್ದಲಿಂಗಪ್ಪ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net