ಹನೂರಿನಲ್ಲಿ ಡಾ. ಬಾಬು ಜಗಜೀವನರಾಮ್ ಜಯಂತಿ ಆಚರಣೆ ಸಂಬಂಧ ಶಾಸಕ ಎಂ.ಆರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕೆ.ಎನ್ ಚೈತ್ರಾ, ಉಮೇಶ್, ಮಹದೇವ, ಸುದೇಶ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
Babuji Jayanti
ಹನೂರು: ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಆಚರಣೆಗೆ ಸಮುದಾಯದ ಮುಖಂಡರು ರೂಪುರೇಷೆ ಸಿದ್ಧಪಡಿಸುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದ ಸಭಾಂಗಣದಲ್ಲಿ ಸೋಮವಾರ ಡಾ. ಬಾಬೂಜಿ ಜಯಂತಿ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಚರ್ಚಿಸಲು ಆಯೋಜಿಸಿದ್ದ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಡಾ.ಬಾಬು ಜಗಜೀವನರಾಮ್ ಅವರು ಉತ್ತಮ ಸಮಾಜಕ್ಕೆ ದಾರಿದೀಪ. ಹಾಗಾಗಿ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಏ.5 ರಂದು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಆದ್ದರಿಂದ ಸಮುದಾಯದ ಮುಖಂಡರು ಅಗತ್ಯ ಸಲಹೆಯನ್ನು ನೀಡಬೇಕು. ಇದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಪಪಂ ಮಾಜಿ ಸದಸ್ಯ ಸುದೇಶ್ ಮಾತನಾಡಿ, ಪ್ರತಿ ವರ್ಷವೂ ಬಾಬೂಜಿ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಸಮುದಾಯದ ಮುಖಂಡರೆಲ್ಲರೂ ನಿರ್ಧರಿಸುತ್ತಿದ್ದೆವು. ಆದರೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುತ್ತಿತ್ತು. ಇದರಿಂದ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಚುನಾವಣೆ ಇಲ್ಲದೇ ಇರುವುದರಿಂದ ಜಯಂತಿಯನ್ನು ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಆಚರಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಶಾಸಕರು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಡಾ. ಬಾಬು ಜಗಜೀವನರಾಮ್ ಒಕ್ಕೂಟಗಳ ತಾಲೂಕು ಅಧ್ಯಕ್ಷ ಮಹದೇವ ಮಾತನಾಡಿ, ತಾಲೂಕಿನಲ್ಲಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಎಲ್ಲ ಮಹನೀಯರ ಜಯಂತಿಯನ್ನು ಆಚರಿಸುವ ರೀತಿಯಲ್ಲೇ ಬಾಬೂಜಿ ಅವರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ಟಿಎಚ್‌ಒ ಡಾ. ಪ್ರಕಾಶ್, ಪಪಂ ಮುಖ್ಯಾಧಿಕಾರಿ ರೇಖಾ, ಸೆಸ್ಕ್ ಎಇಇ ರಂಗಸ್ವಾಮಿ, ಮುಖಂಡರಾದ ರಂಗಸ್ವಾಮಿ, ರಾಜೇಶ್, ಮಹೇಶ್ ಹಾಗೂ ಇನ್ನಿತರರು ಇದ್ದರು.