ಜಿಲ್ಲೆಯ ತೋಟಗಾರಿಕೆ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಚಾಮರಾಜನಗರ ಮತ್ತು ಯಳಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಅಂದಾಜು 342 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟಾಗಿದೆ. ಹನೂರು ತಾಲೂಕಿನಲ್ಲಿ ಅಂದಾಜು 21 ಹೆಕ್ಟೇರ್ ಪ್ರದೇಶ ಹಾಗೂ ಗುಂಡ್ಲುಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ 10 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಅದರಲ್ಲಿ ಶೇ.85 ರಷ್ಟು ಬಾಳೆ ಬೆಳೆಗೆ ಹೆಚ್ಚು ಹಾನಿಯಾಗಿದೆ. ಅದಲ್ಲದೇ ಟೊಮ್ಯೋಟೊ, ಈರುಳ್ಳಿ, ಕಲ್ಲಂಗಡಿ, ಮೆಣಸಿನಕಾಯಿ ಹಾಗೂ ಇನ್ನಿತರೆ ಬೆಳೆಗಳಿಗೆ ಹಾನಿಯಾಗಿದೆ. ಕೃಷಿ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಸುಮಾರು 10 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಮತ್ತು 2 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನಜೋಳ ಸಂಪೂರ್ಣ ಹಾನಿಯಾಗಿದೆ. ಬೆಲೆ ಹೆಚ್ಚಳ, ನೀರು ಮತ್ತು ವಿದ್ಯುತ್ ಸಮಸ್ಯೆ, ಕಾಡುಪ್ರಾಣಿಗಳ ಹಾವಳಿ ಹಾಗೂ ಬೆಳೆಗಳಿಗೆ ಅಗತ್ಯ ಬೆಲೆ ದೊರೆಯದೇ ಸಮಸ್ಯೆ ಅನುಭವಿಸುವ ರೈತಾಪಿ ವರ್ಗ ಅಕಾಲಿಕ ಮಳೆಯಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಪರಿಹಾರ ನೀಡುವಂತೆ ಕೃಷಿಕರು ಹಾಗೂ ರೈತ ಮುಖಂಡರು ಒತ್ತಾಯಿಸಿದ್ದಾರೆ. ಈ ವಾರದ ಲೌಡ್‌ಸ್ಪೀಕರ್‌ನಲ್ಲಿ ರೈತರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.