ಮ.ಬೆಟ್ಟದಲ್ಲಿ ಚಿಣ್ಣರ ಭಿಕ್ಷಾಟನೆಗೆ ಕಡಿವಾಣ ಹಾಕಿ

ಹನೂರಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧ ಆಯೋಗದ ಸದಸ್ಯ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ರಾಜೇಶ್, ಮಾದೇಶ್, ಸಾಹೇಬಗೌಡ, ಶಿವಲೀಲಾ ಇತರರಿದ್ದರು.
ಹನೂರಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧ ಆಯೋಗದ ಸದಸ್ಯ ವೆಂಕಟೇಶ್ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ರಾಜೇಶ್, ಮಾದೇಶ್, ಸಾಹೇಬಗೌಡ, ಶಿವಲೀಲಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸೂಚನೆ
  • ಹನೂರಿನಲ್ಲಿ ಅಧಿಕಾರಿಗಳ ಸಭೆ
ಹನೂರು: ತಾಲೂಕಿನ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಮಕ್ಕಳ ಭಿಕ್ಷಾಟನೆಗೆ ಕಡಿವಾಣ ಹಾಕುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸೂಚಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿಗೃಹದ ಸಭಾಂಗಣದಲ್ಲಿ ಬುಧವಾರ ಮಕ್ಕಳ ಹಕ್ಕುಗಳ ರಕ್ಷಣೆ ಸಂಬಂಧ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಮಕ್ಕಳು ದೇಶದ ಭವಿಷ್ಯದ ರೂವಾರಿಗಳು. ಹಾಗಾಗಿ ಇವರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಕಡ್ಡಾಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದೆ. ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ. ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದೆ. ಆದರೆ ಲಕ್ಷಾಂತರ ಭಕ್ತರು ಭೇಟಿ ನೀಡುವ ಶ್ರೀಕ್ಷೇತ್ರ ಮಹದೇಶ್ವರ ಬೆಟ್ಟದಲ್ಲಿ ಕೆಲ ಮಕ್ಕಳು ಪಾಲಕರ ಜತೆಗೂಡಿ ಭಿಕ್ಷಾಟನೆ ಮಾಡುವುದರ ಮೂಲಕ ಶಾಲೆಯಿಂದ ಹೊರಗುಳಿಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಆದ್ದರಿಂದ ಶಿಕ್ಷಣ, ಸಮಾಜ ಕಲ್ಯಾಣ, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮಕೈಗೊಂಡು ಪಾಲಕರಲ್ಲಿ ಅರಿವು ಮೂಡಿಸುವುದರ ಮೂಲಕ ಮಕ್ಕಳ ಭಿಕ್ಷಾಟನೆಗೆ ಕಡಿವಾಣ ಹಾಕಬೇಕು. ಜತೆಗೆ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ಸೂಚಿಸಿದರು.
ಬಹುಮಾನಕ್ಕೆ ಅರ್ಜಿ ಸಲ್ಲಿಸಿ:
ಬಾಲ್ಯ ವಿವಾಹ ಅಪರಾಧವಾಗಿದ್ದು, ಸಂಬಂಧಪಟ್ಟವರು ಶಿಕ್ಷೆಗೆ ಒಳಗಾಗಬೇಕಾಗುತ್ತದೆ. ಆದರೆ ತಾಲೂಕಿನ ಕೆಲವು ಕಡೆಗಳಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ವಿಪರ್ಯಾಸ. ಆದ್ದರಿಂದ ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಬಾಲ್ಯ ವಿವಾಹ ತಡೆ ಸಮಿತಿ ಅಗತ್ಯ ಕ್ರಮವಹಿಸಬೇಕು. ಇನ್ನು ಕಳೆದ 3 ವರ್ಷದಲ್ಲಿ ಬಾಲ್ಯ ವಿವಾಹವಾಗಿರದ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ 25 ಸಾವಿರ ರೂ. ಬಹುಮಾನವನ್ನು ಘೋಷಿಸಿದೆ. ಈ ಸಂಬಂಧ ಗ್ರಾಪಂಗಳಿಗೆ ಸರ್ಕಾರದಿಂದ ಪತ್ರ ರವಾನಿಸಲಾಗಿದೆ. ಆದರೆ ಹನೂರು ತಾಲೂಕಿನಲ್ಲಿ ಬಹುಮಾನ ಸ್ವೀಕರಿಸುವುದಕ್ಕೆ ಯಾವ ಪಂಚಾಯಿತಿಯಿಂದಲೂ ಈವರೆಗೂ ಅರ್ಜಿ ಸಲ್ಲಿಕೆಯಾಗದಿರುವುದು ನಿಜಕ್ಕೂ ವಿಪರ್ಯಾಸ. ಆದ್ದರಿಂದ ಶೂನ್ಯ ಬಾಲ್ಯ ವಿವಾಹ ಗ್ರಾಪಂ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸದೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಬಹುಮಾನ ಪಡೆದುಕೊಳ್ಳಲು ಮುಂದಾಗಬೇಕು. ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ತಾಪಂ ವ್ಯವಸ್ಥಾಪಕ ರಮೇಶ್ ಅವರಿಗೆ ಸೂಚಿಸಿದರು.
ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕದ ಸಂಯೋಜಕ ಮಹೇಶ್, ಶಿಕ್ಷಣ ಸಂಯೋಜಕ ಅಶೋಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಗೌಸಿಯಾ, ಶಿವಲೀಲಾ, ಆರ್‌ಐ ಮಾದೇಶ್, ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ ಇತರರು ಇದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net