ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ

ಹನೂರು ತಾಲೂಕು ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು, ಶಶಿಕಲಾ, ಅಂಬಿಕಾ, ವಿಶ್ವನಾಥ್, ಭೋಗನಾಯಕ ಇತರರು ಇದ್ದರು.
ಹನೂರು ತಾಲೂಕು ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು, ಶಶಿಕಲಾ, ಅಂಬಿಕಾ, ವಿಶ್ವನಾಥ್, ಭೋಗನಾಯಕ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಪಾಳ್ಯ ರಾಚಯ್ಯ ಸೂಚನೆ
  • ಪ್ರಗತಿ ಪರಿಶೀಲನಾ ಸಭೆ
ಹನೂರು: ಸಮಸ್ಯೆಗಳನ್ನು ಬಗೆಹರಿಸುವುದರ ಜತೆಗೆ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಹಾಗೂ ಸದಸ್ಯರಿಂದ ಮಾಹಿತಿ ಪಡೆದು ಮಾತನಾಡಿದರು.
ಹನೂರು ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡಂಚಿನ ಗ್ರಾಮಗಳಿವೆ. ಹಾಗಾಗಿ ಅಗತ್ಯವಿರುವ ಕಡೆ ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯಬೇಕು. ಸೋಲಿಗರ ಹಾಡಿಗಳಲ್ಲಿ ಆಧಾರ್ ಕಾರ್ಡ್ ಸಮಸ್ಯೆಯಿಂದ ಕೆಲವರು ಗೃಹಲಕ್ಷ್ಮಿ ಯೋಜನೆಯಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು. ತಾಲೂಕಿನ ಕಾಡಂಚಿನ ಗ್ರಾಮ ಪಚ್ಚೆದೊಡ್ಡಿ ಗ್ರಾಮದಲ್ಲಿ ಕೆಲವರು ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿದ್ದು, ಸೌಕರ್ಯ ಸಿಗದಿರುವ ಬಗ್ಗೆ ಗಮನಹರಿಸಬೇಕು. ಜಾತ್ರೆ ವೇಳೆ ಹಾಗೂ ಇನ್ನಿತರ ವಿಶೇಷ ಸಂದರ್ಭದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಹನೂರಿನಿಂದ ಪ್ರತ್ಯೇಕ ಬಸ್ ಸೌಕರ್ಯ ಒದಗಿಸಬೇಕು. ತಾಲೂಕಿನಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ಸರಿಪಡಿಸಬೇಕು. ಆರ್ಹ ಫಲಾನುಭವಿಗಳಿಗೆ ಭಾಗ್ಯಜ್ಯೋತಿ ಯೋಜನೆ ಕಲ್ಪಿಸಬೇಕು. ನಿರುದ್ಯೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹನೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಬೇಕು. ಈ ಮೂಲಕ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಅಗತ್ಯ ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.
ಸಮಿತಿ ಸದಸ್ಯ ಮಾದೇವ ಮಾತನಾಡಿ, ತಾಲೂಕಿನ ಗಿರಿಜನರ ಹಾಡಿ ನೆಲ್ಲಿಕತ್ತರಿಯಲ್ಲಿ ಅಂಗನವಾಡಿ ಕೇಂದ್ರ ಶಿಥಿಲಾವಸ್ಥೆಯಲ್ಲಿದೆ. ಇದರಿಂದ ಮಕ್ಕಳು ಭಯದ ನಡುವೆ ಕಲಿಯಬೇಕಿದೆ. ಕಳೆದ 3 ತಿಂಗಳ ಹಿಂದೆ ಹಾಡಿಗೆ ಭೇಟಿ ನೀಡಿದ್ದ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಈ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಈವರೆಗೆ ಯಾವುದೇ ಕ್ರಮವಾಗಿಲ್ಲ. ಇನ್ನು ತಾಲೂಕಿನ ಜಲ್ಲಿಪಾಳ್ಯ, ಬಸವನಗುಡಿ, ಕೋಣನಕೆರೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಿಸುವಂತೆ ಮನವಿ ಮಾಡಿದರು. ಇದಕ್ಕೆ ಸಿಡಿಪಿಒ ಅಂಬಿಕಾ ಅವರು ಮಾತನಾಡಿ, ಈಗಾಗಲೇ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಸಾರಿಗೆ ಇಲಾಖೆ ಡಿಪೋ ವ್ಯವಸ್ಥಾಪಕ ಭೋಗನಾಯಕ ಮಾತನಾಡಿ, ಪಚ್ಚೆದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ತಿಳಿಯಲಾಗಿದೆ. ಆದರೆ ಸಮರ್ಪಕ ರಸ್ತೆ ಇಲ್ಲದ ಪರಿಣಾಮ ಬಸ್ ಸೌಕರ್ಯ ಕಲ್ಪಿಸಲಾಗಿಲ್ಲ. ರಸ್ತೆಯಾದರೆ ಸೌಕರ್ಯ ಒದಗಿಸಲು ಅಗತ್ಯ ಕ್ರಮವಹಿಸಲಾಗುವುದು. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ಸಮಿತಿ ಸದಸ್ಯರಾದ ಮುಷೀರ್ ಆಹಮದ್, ಸೋಮಶೇಖರ್, ಸಿದ್ದಪ್ಪಾಜಿ, ನಾಗೇಶ್, ಮಹದೇವಮ್ಮ, ತಾಪಂ ಸಹಾಯಕ ಲೆಕ್ಕಾಧಿಕಾರಿ ಶಶಿಕಲಾ, ಆಹಾರ ಶಿರಸ್ತೇದಾರ್ ವಿಶ್ವನಾಥ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net