ಹನೂರಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಉಮೇಶ್, ರಂಗಸ್ವಾಮಿ, ಬಷೀರ್ ಅಹಮದ್, ಗೋವಿಂದ ಇತರರಿದ್ದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ಸೂಚನೆ
ಪ್ರಗತಿ ಪರಿಶೀಲನಾ ಸಭೆ
ಹನೂರು: ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ನೀಡುವಲ್ಲಿ ಅಂಚೆ ಕಚೇರಿ ಸಿಬ್ಬಂದಿ ಕಮಿಷನ್ ಪಡೆಯುತ್ತಿರುವುದಕ್ಕೆ ಕಡಿವಾಣ ಹಾಕುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಾಳ್ಯ ರಾಚಯ್ಯ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ. ಆದರೆ ಕೆಲವು ಯೋಜನೆಯಲ್ಲಿ ಫಲಾನುಭವಿಗಳು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಗ್ರಾಮಗಳಲ್ಲಿ ಮಾಹಿತಿ ಪಡೆದು ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಪೊನ್ನಾಚಿಯ ರಾಮೇಗೌಡನಹಳ್ಳಿಯಲ್ಲಿ ಸರಿಯಾಗಿ ಪಡಿತರವನ್ನು ವಿತರಿಸುತ್ತಿಲ್ಲ. ಇದರಿಂದ ತುಂಬ ಸಮಸ್ಯೆ ಎದುರಿಸುತ್ತಿದ್ದೇವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಆದ್ದರಿಂದ ಈ ಬಗ್ಗೆ ಅಗತ್ಯ ಕ್ರಮವಹಿಸಿ ಸಮರ್ಪಕವಾಗಿ ಪಡಿತರ ವಿತರಣೆಯಾಗಬೇಕು ಎಂದು ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಅವರಿಗೆ ಸೂಚಿಸಿದರು.
ತಾಲೂಕಿನ ಕೆಲವೊಂದು ಅಂಚೆ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಹಣ ನೀಡುವಲ್ಲಿ ಸಿಬ್ಬಂದಿ ಕಮಿಷನ್ ಪಡೆಯುತ್ತಿರುವುದರ ಬಗ್ಗೆ ಕ್ರಮವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಅವರಿಗೆ ಸೂಚಿಸಿದರು. ಈ ವೇಳೆ ಅವರು ಮಾತನಾಡಿ, ಈಗಾಗಲೇ ಅಂಗನವಾಡಿ ಕಾರ್ಯಕರ್ತರಿಗೆ ನಿಗಾ ವಹಿಸಿ ಮಾಹಿತಿ ತಿಳಿಸುವಂತೆ ಸೂಚಿಸಲಾಗಿದ್ದು, ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಹನೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸದಿರುವ ಬಗ್ಗೆ ಉದ್ಯೋಗ ವಿನಿಮಯ ಕಚೇರಿಯ ಸಿಬ್ಬಂದಿ ಯಶವಂತ್ ಹಾಗೂ ಸಮರ್ಪಕ ಮಾಹಿತಿ ನೀಡದ ಸಾರಿಗೆ ಇಲಾಖೆಯ ಸಂಚಾರಿ ನಿಯಂತ್ರಣಾಧಿಕಾರಿ ರಂಗಸ್ವಾಮಿ ಅವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡರು.
ತಾಪಂ ಇಒ ಉಮೇಶ್, ಸೆಸ್ಕ್ ಎಇಇ ರಂಗಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಬಷೀರ್ ಅಹಮದ್, ಗೋವಿಂದ, ಸಿದ್ದಪ್ಪಾಜಿ, ಅರುಣ್, ಶೇಖರ್, ಮಹದೇವಮ್ಮ ಇನ್ನಿತರರು ಇದ್ದರು.