ನಾಲ್ವರು ಸಿಬ್ಬಂದಿ ಮೇಲೆ ಶಿಸ್ತುಕ್ರಮ

ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಮಾತನಾಡಿದರು.
ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಅವರು ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • Disciplinary action
ಚಾಮರಾಜನಗರ: ವಿವಿಧ ಇಲಾಖೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದ ವೇಳೆ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ವಿವಿಧ ಇಲಾಖೆಗಳ ನಾಲ್ವರು ಸಿಬ್ಬಂದಿ ಮೇಲೆ ಶಿಸ್ತು ಕ್ರಮವಹಿಸಬೇಕು ಹಾಗೂ ಒಂದು ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತುಗೊಳಿಸಬೇಕು ಎಂದು ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಶಿಾರಸು ಮಾಡಿದರು.
ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಬಾಲಕರ ಸಂಯುಕ್ತ ಪದವಿಪೂರ್ವ ಕಾಲೇಜು, ಬಂಡಿಗೆರೆ ಗ್ರಾಮದ ಅಂಗನವಾಡಿ ಕೇಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಹಾಗೂ ಮಲ್ಲಯ್ಯನಪುರ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ್ದ ವೇಳೆ ಸಿಬ್ಬಂದಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದೆ ಇರುವುದು ಕಂಡುಬಂದಿದೆ.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ನಾಲ್ವರು ಸಿಬ್ಬಂದಿ ಹಾಗೂ ನ್ಯಾಯಬೆಲೆ ಅಂಗಡಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಶಿಾರಸು ಮಾಡಿದರು.
ಸಭೆಯಲ್ಲೇ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ವಾರ್ಡನ್ ಲತಾ ಅವರನ್ನು ಎರಡು ತಿಂಗಳ ಕಡ್ಡಾಯ ರಜೆ ನೀಡಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಆದೇಶಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಮಲ್ಲಯ್ಯನಪುರ ಗ್ರಾಮದ ನ್ಯಾಯಬೆಲೆ ಅಂಗಡಿ ರದ್ದುಗೊಳಿಸಿ ಆದೇಶ ನೀಡಿದರು. ಉಳಿದ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಉತ್ತರಿಸಿದರು.
ಸಭೆಯಲ್ಲಿ ಆಯೋಗದ ಸದಸ್ಯರಾದ ಕೆ.ಎಚ್.ವಿಜಯಲಕ್ಷ್ಮೀ, ಲಿಂಗರಾಜು ಕೋಟೆ, ರೋಹಿಣಿ ಪ್ರಿಯಾ, ಸುಮಂತ್ ರಾವ್, ದೊಡ್ಡ ಲಿಂಗಣ್ಣ, ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಸಿಮ್ಸ್ ನಿರ್ದೇಶಕರಿಗೆ ತರಾಟೆ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಆಯೋಗದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಯ ಗರ್ಭಿಣಿಯರಿಗೆ ನೀಡುವ ಹಣವನ್ನು ಬೇರೆ ೆನ್ ನಂಬರ್ ಬಳಸಿ ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬರುತ್ತಿದೆ. ರೋಗಿಗಳಿಗೆ ಸಮರ್ಪಕವಾಗಿ ಪೌಷ್ಟಿಕ ಆಹಾರವನ್ನು ನೀಡಬೇಕು. ಸಮಯಕ್ಕೆ ಸರಿಯಾಗಿ ರಕ್ತ ಪರೀಕ್ಷೆ ವರದಿಯನ್ನು ನೀಡಬೇಕು ಎಂದು ಡಾ.ಎಚ್.ಕೃಷ್ಣ ಸೂಚಿಸಿದರು.
ಈ ವೇಳೆ ಸಾರ್ವಜನಿಕರೊಬ್ಬರು ಸಿಮ್ಸ್ ಆಸ್ಪತ್ರೆಯಲ್ಲಿ ಸಮಯಕ್ಕೆ ಸರಿಯಾಗಿ ರಕ್ತ ಪರೀಕ್ಷೆ ವರದಿ ನೀಡುವುದಿಲ್ಲ ಎಂದು ದೂರಿದರು. ಜಿಲ್ಲಾಧಿಕಾರಿ ಶ್ರೀರೂಪಾ ಅವರು ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಸಮಸ್ಯೆಗಳು ಬರಬಾರದು ಎಂದು ಸೂಚಿಸಿದ್ದರೂ, ದೂರುಗಳು ಬರುತ್ತಿವೆ ಎಂದು ಸಿಮ್ಸ್ ಡೀನ್ ಡಾ.ಮಂಜುನಾಥ್ ಅವರನ್ನು ತರಾಟೆಗೆ ತೆಗೆದುಕೊಂಡರು. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಕಂಡುಬರದಂತೆ ತಕ್ಷಣ ಸಭೆ ಕರೆದು, ಸಿಬ್ಬಂದಿಯೊಂದಿಗೆ ಚರ್ಚಿಸಿ ಕ್ರಮವಹಿಸಿ ಎಂದು ಸೂಚಿಸಿದರು.
ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ವಿದ್ಯಾರ್ಥಿಗಳಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ ಎಂದು ಡಾ.ಎಚ್.ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದರು.
ಹಾಸ್ಟೆಲ್‌ಗಳಲ್ಲಿ ಸಿಬ್ಬಂದಿ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸುವುದಿಲ್ಲ, ಶುದ್ಧ ಕುಡಿಯುವ ನೀರು, ಶೌಚಗೃಹ, ಗ್ರಂಥಾಲಯ ಸೌಲಭ್ಯಗಳು ಇಲ್ಲದೇ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್, ಸಮವಸ, ಆಟದ ಪರಿಕರಗಳನ್ನು ನೀಡಿಲ್ಲ, ಆರೋಗ್ಯ ತಪಾಸಣೆ ಮಾಡಿಸಿಲ್ಲ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಂಪ್ಯೂಟರ್‌ಗಳು ಇಲ್ಲ, ಕಾಲಕಾಲಕ್ಕೆ ಪಾಲಕರ ಸಭೆಯನ್ನು ಕರೆದಿಲ್ಲ ಎಂದು ಬೇಸರ ಹೊರಹಾಕಿದರು.
ಹಾಸ್ಟೆಲ್‌ಗಳಿಗೆ ಆಹಾರ ಪೂರೈಕೆ ಮಾಡುವವರು ಸಮರ್ಪಕವಾಗಿ ಪೂರೈಸುತ್ತಿಲ್ಲ, ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಸೂಚನೆ ನೀಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಈ ವೇಳೆ ತರಾಟೆಗೆ ತೆಗೆದುಕೊಂಡರು.
ಕಡ್ಡಾಯವಾಗಿ ಆಹಾರ ಪರೀಕ್ಷಿಸಿ: ಜಿಲ್ಲೆಯಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುವ ವೇಳೆ ಕೆಮಿಕಲ್ ಮಿಶ್ರಿತ ಬಣ್ಣಗಳನ್ನು, ಪ್ಲಾಸ್ಟಿಕ್‌ಗಳನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ ಎಂಬ ದೂರುಗಳು ಸಾಕಷ್ಟು ಕೇಳಿಬರುತ್ತಿದ್ದು, ಕೊಳ್ಳೇಗಾಲ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ಹೋಟೆಲ್‌ಗಳಿಗೆ ಭೇಟಿ ನೀಡಿ ಕಡ್ಡಾಯವಾಗಿ ಆಹಾರಗಳನ್ನು ಪರೀಕ್ಷಿಸಿ ಎಂದು ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಸೂಚಿಸಿದರು.
ಕಡ್ಡಾಯವಾಗಿ ಆಹಾರ ಪದಾರ್ಥಗಳನ್ನು ಪರೀಕ್ಷಿಸಿ ಸಮಸ್ಯೆ ಕಂಡುಬರುವ ಹೋಟೆಲ್‌ಗಳಿಗೆ ಬೀಗ ಹಾಕಿದಾಗ ಮಾತ್ರ ಉಳಿದವರು ಎಚ್ಚರಿಕೆಯಿಂದ ನಿರ್ವಹಣೆ ಮಾಡುತ್ತಾರೆ. ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಆಹಾರ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರಸಭೆ ವ್ಯಾಪ್ತಿಯಲ್ಲೂ ಅಧಿಕಾರಿಗಳು ಹೋಟೆಲ್‌ಗಳಿಗೆ ಆಗಾಗ ಭೇಟಿ ನೀಡಿ ಪರಿಶಿಲನೆ ನಡೆಸಬೇಕು ಎಂದು ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net