ಹನೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಂಬಂಧ ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಆಯೋಜಿಸಲಾಗಿತ್ತು. ಕೆ.ಎನ್.ಚೈತ್ರಾ, ರಂಗಸ್ವಾಮಿ, ರವೀಂದ್ರ, ರೇಖಾ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ
ಹನೂರಿನಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆ
ಹನೂರು :
ಜನ, ಜಾನುವಾರುಗಳಿಗೆ ಯಾವುದೇ ರೀತಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಪ್ರತಿಯೊಬ್ಬರೂ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ ನೀಡಿದರು.
ಪಟ್ಟಣದಲ್ಲಿ ಗುರುವಾರ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಂಬಂಧ ಆಯೋಜಿಸಿದ್ದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಸಮರ್ಪಕವಾಗಿ ಮಳೆಯಾಗದ ಪರಿಣಾಮ ಅಂತರ್ಜಲ ಮಟ್ಟ ಕುಸಿದಿದ್ದು, ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭಿರವಾಗಿದೆ. ಜನರಿಗೆ ನೀರೊದಗಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ನಿರ್ದೇಶನ ನೀಡಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿರುವ ಆಯಾ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನೀರಾವರಿ ಜಮೀನು ಹೊಂದಿರುವ ಕೆಲ ರೈತರು ಬೆಳೆ ಹಾಕಿದ್ದಾರೆ. ಆದರೆ ಪಂಪ್‌ಸೆಟ್‌ನಿಂದ ಸಮರ್ಪಕ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆಳೆ ಬೆಳೆಯಲು ತೊಡಕಾಗಿದೆ. ಆದ್ದರಿಂದ ಇಂತಹ ರೈತರನ್ನು ಭೇಟಿಯಾಗಿ ಕುಡಿಯುವ ನೀರಿಗೆ ಸಂಪರ್ಕ ನೀಡುವಂತೆ ಮನವೊಲಿಸಬೇಕು. ನೀರಿನ ಸಮಸ್ಯೆಯಾಗದಂತೆ ಎಲ್ಲ ಆಯಾಮದಲ್ಲೂ ಪ್ರಯತ್ನ ನಡೆಸಬೇಕು. ಈ ಬಗ್ಗೆ ಪಟ್ಟಿ ತಯಾರಿಸಿ ಅಗತ್ಯ ಕ್ರಮವಹಿಸುವಂತೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಂಗಸ್ವಾಮಿ ಹಾಗೂ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವೀಂದ್ರ ಅವರಿಗೆ ಸೂಚಿಸಿದರು.
ಇನ್ನು ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿರುವ ಗ್ರಾಮಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನೀರು ಸಾಲುತ್ತಿಲ್ಲ ಎಂಬುದು ಗ್ರಾಮಸ್ಥರಿಂದ ದೂರು ಬಂದಿದೆ. ಹಾಗಾಗಿ ಸಮರ್ಪಕ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಬೇಕು. ಇನ್ನು ಕೆಲವು ಕಾಡಂಚಿನ ಗ್ರಾಮಗಳಲ್ಲಿ ಬಾವಿಯಿಂದ ಪಡೆಯುತ್ತಿರುವ ನೀರನ್ನು ಪರೀಕ್ಷಿಸಿ ಜನರಿಗೆ ಪೂರೈಸಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಜೆಜೆಎಂ ಕಾಮಗಾರಿ ಪೂರ್ಣಗೊಂಡಿರುವೆಡೆ ಪೈಪ್‌ಲೈನ್ ಪರೀಕ್ಷಿಸಿ ಸಮರ್ಪಕವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಒಟ್ಟಿನಲ್ಲಿ ಉತ್ತಮ ಮಳೆಯಾಗುವ ತನಕ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಪ್ರತಿ ಪಂಚಾಯಿತಿವಾರು ಪಿಡಿಒಗಳಿಂದ ಕುಡಿಯುವ ನೀರಿನ ಸಮಸ್ಯೆಯ ವಾಸ್ತವ ಸ್ಥಿತಿ ಬಗ್ಗೆ ಮಾಹಿತಿ ಪಡೆದ ಶಾಸಕರು ಕೆಲ ಸಲಹೆ ನೀಡಿದರು. ಬರ ವೀಕ್ಷಣೆ ಹಿನ್ನೆಲೆಯಲ್ಲಿ ಆ.7ರಂದು ಸಚಿವ ಪುಟ್ಟರಂಗಶೆಟ್ಟಿ ಅವರು ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ವಾಸ್ತವ ಸ್ಥಿತಿಯ ಬಗ್ಗೆ ವರದಿ ಸಿದ್ಧಪಡಿಸಿಕೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಕೆ.ಎನ್.ಚೈತ್ರಾ, ಪಪಂ ಮುಖ್ಯಾಧಿಕಾರಿ ರೇಖಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇ ಪೂರ್ಣಿಮಾ, ಸೆಸ್ಕ್ ಎಇಇ ರಂಗಸ್ವಾಮಿ, ತೋಟಗಾರಿಕೆ ಇಲಾಖೆ ಎಡಿ ಅನಿತಾ ಇತರರು ಇದ್ದರು.