ರಸ್ತೆ ಸಂಚಾರ ತಡೆದು ರೈತರ ಆಕ್ರೋಶ

ವಡಕೆಹಳ್ಳದಲ್ಲಿ ಸಾವಿರಾರು ರೈತರು ರಸ್ತೆಯಲ್ಲೇ ಶಾಮಿಯಾನ ಹಾಕಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ವಡಕೆಹಳ್ಳದಲ್ಲಿ ಸಾವಿರಾರು ರೈತರು ರಸ್ತೆಯಲ್ಲೇ ಶಾಮಿಯಾನ ಹಾಕಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಏತ ನೀರಾವರಿ ಯೋಜನೆ ರೂಪಿಸುವಂತೆ ಆಗ್ರಹ
ಹನೂರು: ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಯೋಜನೆ ರೂಪಿಸುವಂತೆ ಆಗ್ರಹಿಸಿ ತಾಲೂಕಿನ ವಡಕೆಹಳ್ಳದಲ್ಲಿ 97 ದಿನಗಳಿಂದಲೂ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಂದುವರಿದಿದ್ದು, ಶನಿವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ರೈತ ಸಂಘ ಹಾಗೂ ದಂಟಳ್ಳಿ ಏತ ನೀರಾವರಿ ಹೋರಾಟ ಸಮಿತಿ ವತಿಯಿಂದ ರೈತರು 99 ದಿನಗಳಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದು, ವಿವಿಧ ಸಂಘಟನೆ, ಚರ್ಚ್ ಫಾದರ್‌ಗಳು ಹಾಗೂ ಮಹಿಳೆಯರು ಬೆಂಬಲ ನೀಡಿದ್ದಾರೆ. ಧರಣಿ ಸ್ಥಳಕ್ಕೆ ಶಾಸಕರು, ಜಿಲ್ಲಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ನೀರಾವರಿ ಯೋಜನೆ ಸಂಬಂಧ ಡಿಪಿಆರ್ ಸಿದ್ಧಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮವಾಗಿಲ್ಲ. ಇದರಿಂದ ಬೇಸತ್ತ ಸಾವಿರಾರು ರೈತರು ಮಲೆಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲೆ ಶಾಮಿಯಾನ ಹಾಕಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು. ಅಲ್ಲದೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.
ಮಾರ್ಟಳ್ಳಿ, ಶೆಟ್ಟಳ್ಳಿ ಹಾಗೂ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದ್ದು, ಸಾವಿರ ಅಡಿ ಬೋರ್ ಕೊರೆಸಿದರೂ ನೀರು ಸಿಗುತ್ತಿಲ್ಲ. ಇದರಿಂದ ಕೃಷಿ ಹಾಗೂ ಕುಡಿಯುವ ನೀರಿಗೆ ತೊಂದರೆ ಎದುರಾಗಿದೆ. ದಂಟಳ್ಳಿ ಸಮೀಪದಲ್ಲಿ ಕಾವೇರಿ ನದಿ ಹರಿಯುತ್ತಿದ್ದು, ನೀರು ತಮಿಳುನಾಡಿನ ಪಾಲಾಗುತ್ತಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ರೈತರನ್ನು ಕಡೆಗಣಿಸಲಾಗುತ್ತಿದೆ. ಹಾಗಾಗಿ ಧರಣಿಯಿಂದ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿ ಅವರು ಆಗಮಿಸಿ ಯೋಜನೆಯನ್ನು ರೂಪಿಸಲು ಅಗತ್ಯ ಕ್ರಮವಹಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಉಗ್ರ ರೂಪ ತಾಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಯೋಜನೆ ರೂಪಿಸಿ: ಬಿಜೆಪಿ ಮುಖಂಡ ನಿಶಾಂತ್ ಮಾತನಾಡಿ, ಈ ಭಾಗದಲ್ಲಿ ಬೇಸಿಗೆ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರಾವರಿ ಯೋಜನೆಯನ್ನು ರೂಪಿಸುವಂತೆ ಆಗ್ರಹಿಸಿ ರೈತರು 97 ದಿನಗಳಿಂದಲೂ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಈ ಕಾರ್ಯವಾಗಿಲ್ಲ. ಮಳೆಗಾಲದ ವೇಳೆ ಕಾವೇರಿಯ ನೂರಾರು ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿದೆ. ಆದ್ದರಿಂದ ಈ ಮಾರ್ಗದಲ್ಲಿ 4 ಯೋಜನೆಯನ್ನು ರೂಪಿಸಿದರೆ ಇಡೀ ಜಿಲ್ಲೆಗೆ ನೀರಾವರಿ ಸೌಕರ್ಯವನ್ನು ಒದಗಿಸಬಹುದು ಎಂದರು.
ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ಜವರೇಗೌಡ ಸಮಸ್ಯೆ ಆಲಿಸಿದರು. ಈ ಸಂಬಂಧ ಜಿಲ್ಲಾ ಉಸ್ತುವಾರಿ, ನೀರಾವರಿ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಚಿವರ ಗಮನಕ್ಕೆ ತಂದು ಅಧಿಕಾರಿಗಳು ಹಾಗೂ ರೈತರ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಜವರೇಗೌಡ ಭರವಸೆ ನೀಡಿದರು. ಇದಕ್ಕೆ ಪ್ರತಿಭಟನಾಕಾರರು ಪ್ರತಿಕ್ರಿಯಿಸಿ, ಮಹಾ ಶಿವರಾತ್ರಿಗೂ ಮುನ್ನಾ ಈ ಕಾರ್ಯವಾಗಬೇಕು. ಇಲ್ಲವಾದಲ್ಲಿ ಜಾತ್ರಾ ವೇಳೆ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸುವ ಮೂಲಕ ಪ್ರತಿಭಟನೆಯನ್ನು ಕೈಬಿಡಲಾಯಿತು. ಪ್ರತಿಭಟನೆಯಿಂದ ಸುಮಾರು ಒಂದೂವರೆ ಗಂಟೆ ಕಾಲ ವಾಹನ ಸಂಚಾರ ಬಂದ್ ಆಗಿದ್ದು, ಮ.ಬೆಟ್ಟಕ್ಕೆ ತೆರಳುವ ಭಕ್ತರು ತೊಂದರೆ ಅನುಭವಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ಗ್ರಾಮ ಘಟಕದ ಅಧ್ಯಕ್ಷ ಅರ್ಪುದರಾಜ್, ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಹಾಗೂ ಮಹಿಳೆಯರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು. ಎಸ್ಪಿ ಮುತ್ತುರಾಜು, ಎಎಸ್ಪಿ ಶಶಿಧರ, ತಹಸೀಲ್ದಾರ್ ಕೆ.ಎನ್ ಚೈತ್ರಾ, ನೀರಾವರಿ ಇಲಾಖೆಯ ಇಇ ಉಮೇಶ್, ಎಇಇ ಕರುಣಾಮಯಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net