ಪ್ರತಿಭಟನೆ ಕೈಗೊಂಡ ಮೂರನೇ ದಿನ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ರೈತರನ್ನು ಭೇಟಿ ನೀಡಿ ನವೆಂಬರ್ ಮೊದಲ ವಾರದಲ್ಲಿ ನೀರು ಹರಿಸುವುದಾಗಿ ಭರವಸೆ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ್ದರು. ನಾಲ್ಕನೇ ದಿನ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಭೇಟಿ ನೀಡಿ ಪ್ರತಿಭಟನೆಯನ್ನು ಬೆಂಬಲಿಸಿ ಜಿಲ್ಲಾಡಳಿತದ ವೈಫಲ್ಯವನ್ನು ಖಂಡಿಸಿದ್ದರು. ಅ.27ರಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಪ್ರತಿಭಟನಾಕಾರರನ್ನು ಭೇಟಿ ಮಾಡಿ, ಅಹವಾಲು ಆಲಿಸಿ ಪ್ರತಿಭಟನೆ ಕೈಬಿಡುವಂತೆ ಕೋರಿದ್ದರು. ಅಲ್ಲದೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಹ ಜಿಲ್ಲಾ ಕೇಂದ್ರದಲ್ಲಿ ರೈತ ಮುಖಂಡರಿಂದ ಸಮಸ್ಯೆ ಆಲಿಸಿ ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವ ಭರವಸೆ ನೀಡಿದ್ದರು.