ತಾಲೂಕಿನಲ್ಲಿ ಈ ಬಾರಿ ಮಳೆ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಒಂದು ಸಾವಿರ ಅಡಿ ಬೋರ್ ಕೊರೆಸಿದರೂ ನೀರು ಸಿಗುತ್ತಿಲ್ಲ. ಇದರಿಂದ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಬೇಸಿಗೆ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜನರು ಪರತಪಿಸುತ್ತಿದ್ದಾರೆ. ಕೆಲವು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದ್ದರೆ, ಇನ್ನೂ ಕೆಲವು ಗ್ರಾಮಗಳಲ್ಲಿ ಖಾಸಗಿ ಜಮೀನಿನ ಪಂಪ್‌ಸೆಟ್‌ಗಳಿಂದ ನೀರೊದಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಾಗದ ಪರಿಣಾಮ ಬಿಸಿಲಿನ ತಾಪಕ್ಕೆ ಬಹುತೇಕ ಕೆರೆ-ಕಟ್ಟೆಗಳು ಹಾಗೂ ಹಳ್ಳಕೊಳ್ಳಗಳು ಬತ್ತಿ ಹೋಗಿವೆ. ಇದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವದ ಜತೆಗೆ ಮೇವಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ರೈತರನ್ನು ಚಿಂತೆಗೀಡು ಮಾಡಿದೆ. ಮೇವನ್ನು ಖರೀದಿಸಿ ದಾಸ್ತಾನು ಇರಿಸಿಕೊಳ್ಳುವ ಸ್ಥಿತಿ ಎದುರಾಗಿದೆ.