ಕ್ರೀಡೆ, ಕ್ರೀಡಾಪಟುಗಳಿಗೆ ಸರ್ಕಾರದಿಂದ ಉತ್ತೇಜನ

ಸಿ.ಎಸ್.ಅರುಣ್ ಮಾಚಯ್ಯ
ಸಿ.ಎಸ್.ಅರುಣ್ ಮಾಚಯ್ಯ
Published on

ಪ್ರಮುಖ ಮುಖ್ಯಾಂಶಗಳು

  • ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಹೇಳಿಕೆ
  • ರಾಜ್ಯ ಸರ್ಕಾರ ಕ್ರೀಡಾ ಸ್ನೇಹಿ
ಚಾಮರಾಜನಗರ: ರಾಜ್ಯ ಸರ್ಕಾರ ಕ್ರೀಡಾ ಸ್ನೇಹಿಯಾಗಿದ್ದು, ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ತಿಳಿಸಿದರು.
ನಗರದ ಹಳೆ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿಗೆ ಶೇ.2ರಷ್ಟು ಮೀಸಲಾತಿಯನ್ನು ಕ್ರೀಡಾಪಟುಗಳಿಗೆ ಘೋಷಿಸಿ ಅನುಷ್ಠಾನಕ್ಕೆ ತಂದಿದೆ. ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತರಿಗೆ ಡಿವೈಎಸ್‌ಪಿ ಹುದ್ದೆಗೆ ಸರಿಸಮಾನವಾದ ಹುದ್ದೆಯನ್ನು ನೀಡಿದೆ ಎಂದರು.
2028ರಲ್ಲಿ ಲಾಸ್‌ಏಂಜಲಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟಕ್ಕೆ ರಾಜ್ಯದ ಕ್ರೀಡಾಪಟುಗಳನ್ನು ಸಿದ್ಧಗೊಳಿಸಲು ಅರ್ಜಿ ಆಹ್ವಾನಿಸಲಾಗಿತ್ತು. 173 ಅರ್ಜಿಗಳು ಬಂದಿದ್ದು, ಇದರಲ್ಲಿ 60 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಪ್ರತಿ ಕ್ರೀಡಾಪಟುವಿಗೆ ತಿಂಗಳಿಗೆ 80 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಒಬ್ಬರಿಗೆ ವರ್ಷಕ್ಕೆ 10 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಒಂದು ತಿಂಗಳ ಕಂತಿನ ಹಣ ಬಿಡುಗಡೆಯಾಗಿದೆ ಎಂದರು.
ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್, ಒಲಿಂಪಿಕ್ಸ್, ರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದವರಿಗೆ ನಗದು ಬಹುಮಾನ ನೀಡಲಾಗುತ್ತದೆ. ಹೀಗೆ ಹಲವು ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಕ್ರೀಡಾಪಟುಗಳಿಗೆ ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಸರ್ಕಾರ 13 ಕೋಟಿ ರೂ. ಬಿಡುಗಡೆ ಮಾಡಿದೆ. ತಾಲೂಕುಗಳ ಕ್ರೀಡಾಂಗಣ ಅಭಿವೃದ್ಧಿಗೂ ಕ್ರಮ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಸಂತೇಮರಹಳ್ಳಿಯ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿ ಎಂ. ಜಯಸೂರ್ಯ ಹಾಗೂ ಎಸ್. ನಿಂಗರಾಜು 32ನೇ ಜೂನಿಯರ್ ನ್ಯಾಷನಲ್ ಫೆನ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಕಂಚಿನ ಪದಕ ಗಳಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆೆಯಲ್ಲಿ 3 ಲಕ್ಷ ರೂ. ವಿದ್ಯಾರ್ಥಿ ವೇತನ ಪಡೆದಿದ್ದಾರೆ. ರಾಜ್ಯದಲ್ಲಿ 12 ಕ್ರೀಡಾ ಅಸೋಸಿಯೇಷನ್‌ಗಳಿಗೆ ತಲಾ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಎಚ್.ಎಸ್. ಬಿಂದ್ಯಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net