ಮಾರ್ಟಳ್ಳಿ ಗ್ರಾಪಂ ಸಮೀಪದ ಮರುಧ ಅವರು ಮಾರ್ಟಳ್ಳಿ ಗ್ರಾಮದಲ್ಲಿನ 3 ಮದ್ಯದ ಅಂಗಡಿಗಳನ್ನು ತೆರವುಗೊಳಿಸುವಂತೆ ಕಳೆದ ಒಂದು ತಿಂಗಳಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದರು. ಜ.19ರಂದು ಮರುಧ ಜತೆ ಸಂಬಂಧಿಕರು ಸೇರಿ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಬಗ್ಗೆ ತಿಳಿದ ರಾಮಾಪುರ ಸಬ್ ಇನ್ಸ್‌ಪೆಕ್ಟರ್ ಈಶ್ವರ್ ಸ್ಥಳಕ್ಕೆ ಭೇಟಿ ನೀಡಿ ಕಾನೂನಿನ ಅರಿವು ಮೂಡಿಸಿದ್ದರೂ ತಹಸೀಲ್ದಾರ್ ಅವರು ಆಗಮಿಸಬೇಕು ಎಂದು ಪಟ್ಟು ಹಿಡಿದಿದ್ದರು. ಹಾಗಾಗಿ, ರಾಮಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬುಧವಾರ ಪ್ರತಿಭಟನೆಯ ಪ್ರಮುಖ ವ್ಯಕ್ತಿ ಮರುಧ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಷಯ ತಿಳಿದ ಸಂಬಂಧಿಕರು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.