ಉಪನ್ಯಾಸಕರು ಸಂಶೋಧನೆ, ನಾವೀನ್ಯತೆಗೆ ಒತ್ತುನೀಡಿ

ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಪ್ರೊ.ಎಂ.ಆರ್.ಗಂಗಾಧರ್ ಉದ್ಘಾಟಿಸಿದರು. ಎಚ್.ಎನ್.ವಿಶ್ವನಾಥ್, ಪ್ರೊ.ಮೊರಬದ ಮಲ್ಲಿಕಾರ್ಜುನ, ಡಾ.ಎನ್.ಮಹದೇವಸ್ವಾಮಿ ಇನ್ನಿತರರಿದ್ದರು.
ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಪ್ರೊ.ಎಂ.ಆರ್.ಗಂಗಾಧರ್ ಉದ್ಘಾಟಿಸಿದರು. ಎಚ್.ಎನ್.ವಿಶ್ವನಾಥ್, ಪ್ರೊ.ಮೊರಬದ ಮಲ್ಲಿಕಾರ್ಜುನ, ಡಾ.ಎನ್.ಮಹದೇವಸ್ವಾಮಿ ಇನ್ನಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಸಲಹೆ
  • ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರ
  • ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು
ಚಾಮರಾಜನಗರ: ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಕ್ರಾಂತಿಕಾರಿ ಬದಲಾವಣೆಗೆ ಶಿಕ್ಷಕರು ಹಾಗೂ ಉಪನ್ಯಾಸಕರು ತೆರೆದುಕೊಳ್ಳುವ ಮೂಲಕ ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತುನೀಡಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ಗಂಗಾಧರ್ ಸಲಹೆ ನೀಡಿದರು.
ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಕಾಲೇಜು ಸಿಬ್ಬಂದಿಗಳಿಗೆ ಸಾಮರ್ಥ್ಯ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್ ಹಾಗೂ ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಉಪನ್ಯಾಸಕರು ಇವುಗಳ ಕೌಶಲ್ಯ ಬೆಳೆಸಿಕೊಳ್ಳಬೇಕು. ಬದಲಾವಣೆಗೆ ಸದಾ ಒಗ್ಗಿಕೊಳ್ಳಬೇಕು. ಸಾಂಪ್ರಾದಾಯಿಕ ಬೋಧನಾ ಶೈಲಿಯ ಬದಲಾಗಿ ಆಧುನಿಕ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಅಗತ್ಯತೆಗೆ ತಕ್ಕಂತೆ ಬೋಧಿಸಬೇಕು ಎಂದು ಹೇಳಿದರು.
ಸುಮಾರು ಎರಡು ಶತಮಾನಗಳ ಕಾಲ ಆಳ್ವಿಕೆ ನಡೆಸಿದ ಬ್ರಿಟೀಷರು ದೇಶದ ಸಂಸ್ಕೃತಿ, ಪರಂಪರೆ ನಾಶ ಮಾಡುವುದರ ಜತೆಗೆ ಮೆಕಾಲೆ ಪದ್ಧತಿ ಅಳವಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡವಲು ಯತ್ನಿಸಿದ್ದರು. ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಒತ್ತು ನೀಡಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳಿಗೆ ಬಹುಶಿಸ್ತೀಯಾ ಕಲಿಕೆಗೆ ಅವಕಾಶಗಳಿದ್ದು, ಏಕಕಾಲದಲ್ಲಿ ಹಲವು ವಿಷಯಗಳನ್ನು ಕಲಿಯಬಹುದಾಗಿದೆ. ಕೌಶಲ್ಯಯುಕ್ತ ಮತ್ತು ವಿಭಿನ್ನ ಕಲಿಕಾ ಕ್ರಮಕ್ಕೆ ಇದು ಒತ್ತುನೀಡಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಿಸಿಕೊಂಡರೆ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಪಡೆಯಲು ಅವಕಾಶವಾಗಲಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಎಚ್.ಎನ್.ವಿಶ್ವನಾಥ್ ಮಾತನಾಡಿ, ಉನ್ನತ ಶಿಕ್ಷಣ ಕೇಂದ್ರಿತವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕಲಿಕೆಗೂ ಒತ್ತು ನೀಡಲಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಕೌಶಲ, ಅಧ್ಯಯನ ಮತ್ತು ಸಂಶೋಧನೆಗೆ ಒತ್ತು ನೀಡಬೇಕಿದೆ ಎಂದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ನೀಡಿರುವ ಕೊಡುಗೆ ಅಪಾರವಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ. ಪ್ರಸ್ತುತ ಅಪರಾಧ, ಭಯೋತ್ಪಾದನೆ ಹಾಗೂ ಮಾನಸಿಕ ಹಿಂಸೆಗೆ ಕಾರಣವಾಗುವ ಭೀಕರ ಸುದ್ದಿಗಳಿಂದ ಸಮಾಯದಲ್ಲಿ ಸ್ವಾಸ್ಥ್ಯ ಹಾಳಾಗುತ್ತಿದೆ. ಅಪರಾಧ ವೈಭವೀಕರಣ ಸಮಾಜಕ್ಕೆ ಮಾರಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಮಹದೇವಸ್ವಾಮಿ ಹಾಗೂ ಇತರರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net