ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಸೂಚನೆ
ಹನೂರು:ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಸಮಸ್ಯೆಗೆ ಪರ್ಯಾಯ ವ್ಯವಸ್ಥೆ ಮೂಲಕ ನಿರೋದಗಿಸಿ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.
ಕುಡಿಯುವ ನೀರಿನ ಸಮಸ್ಯೆ ಸಂಬಂಧ ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ತಾಲೂಕಿನಲ್ಲಿ ಈ ಬಾರಿ ಮಳೆಯಾಗದ ಪರಿಣಾಮ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಜನರು ನೀರಿಗಾಗಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಜನರಿಗೆ ನೀರೋದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಖಾಸಗಿ ಜಮೀನಿನ ಪಂಪ್‌ಸೆಟ್‌ನಿಂದ ನೀರೋದಗಿಸಬೇಕು. ಯಾವುದೇ ಕಾರಣಕ್ಕೂ ಜನರು ನೀರಿನ ಸಮಸ್ಯೆಯನ್ನು ಎದುರಿಸುವಂತಾಗಬಾರದು. ಇನ್ನು ದುರಸ್ತಿಗೊಂಡಿರುವ ತೊಟ್ಟಿಗಳನ್ನು ರಿಪೇರಿ ಮಾಡಿ ಜಾನುವಾರುಗಳಿಗೂ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮವಹಿಸುವಂತೆ ತಾಲೂಕು ಪಂಚಾಯಿತಿ ಇಒ ಉಮೇಶ್‌ಗೆ ಸೂಚಿಸಿದರು.
ಇದೇ ವೇಳೆ ಎಲ್ಲೇಮಾಳ ಪಿಡಿಒ ಅವರಿಂದ ಮಾಹಿತಿ ಪಡೆದು ಮಾತನಾಡಿದ ಶಾಸಕ, ಈ ಗ್ರಾಮದಲ್ಲಿ ನೀರಿನ ವ್ಯವಸ್ಥೆ ಉತ್ತಮವಾಗಿದೆ. ಸಮಸ್ಯೆ ಎದುರಿಸುತ್ತಿರುವ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಇಲ್ಲಿನ ನೀರನ್ನು ಟ್ಯಾಂಕರ್ ಮೂಲಕ ಪೂರೈಸುವಂತೆ ಸೂಚಿಸಿದರು.
ತಾಲೂಕಿನಲ್ಲಿ ತೀವ್ರ ಕುಡಿವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮಗಳಿಗೆ ಬೂದುಬಾಳು ಬಳಿ ಹರಿಯುತ್ತಿರುವ ಕಾವೇರಿ ನೀರನ್ನು ದೊಡ್ಡ ಟ್ಯಾಂಕರ್ ಮೂಲಕ ಪೂರೈಸಲು ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ತಹಸೀಲ್ದಾರ್ ಕೆ.ಎನ್ ಚೈತ್ರಾ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವನಾಗ್, ತಾಪಂ ಎಡಿ ರವಿಂದ್ರ, ಪಿಡಿಒಗಳಾದ ಸುರೇಶ್, ಮಾದೇಶ್, ನಂಜುಂಡಸ್ವಾಮಿ, ಸೆಲ್ವರಾಜ್, ಲೋಕೇಶ್, ಕಿರಣ್, ಗಂಗಾಧರ್, ಸಿದ್ದಪ್ಪ ಇತರರಿದ್ದರು.