ಮಲೆಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವಂತೆ ಮೈಸೂರು ಪರಿಸರ ವಾರಿಯರ್ಸ್ ಗ್ರೂಪ್ ಹಾಗೂ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರಿಗೆ ಮನವಿ ಸಲ್ಲಿಸಿದರು. ಮಂಜುನಾಥ್, ಪ್ರಸಾದ್, ಹರೀಶ್ ಇತರರಿದ್ದರು.
ಹನೂರು:ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಸಂಬಂಧ ಮೈಸೂರು ಪರಿಸರ ವಾರಿಯರ್ಸ್ ಗ್ರೂಪ್ ಹಾಗೂ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಸೋಮವಾರ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರಲ್ಲಿ ಮನವಿ ಸಲ್ಲಿಸಿದರು.
ವಜ್ರಮಲೆ ಭವನದಲ್ಲಿ ಕಾರ್ಯದರ್ಶಿ ಅವರನ್ನು ಭೇಟಿಯಾದ ವೇಳೆ ಮೈಸೂರು ಪರಿಸರ ವಾರಿಯರ್ಸ್ ಗ್ರೂಪ್‌ನ ಮಂಜುನಾಥ್ ಮಾತನಾಡಿ, ಮ.ಬೆಟ್ಟ ಪ್ಲಾಸ್ಟಿಕ್ ಮುಕ್ತ ಪ್ರದೇಶವಾಗಿ ಘೋಷಣೆಯಾಗಿದ್ದರೂ ಪ್ಲಾಸ್ಟಿಕ್ ಬಳಕೆ ನಿಂತ್ತಿಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿದೆ. ಆದ್ದರಿಂದ ಧಾರ್ಮಿಕತೆಯ ಜತೆಗೆ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವಂತೆ ಮನವಿ ಮಾಡಿದರು. ಇದಕ್ಕೆ ಕಾರ್ಯದರ್ಶಿ ಅವರು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಬಳಿಕ ಆವರಣದಲ್ಲಿ ಎಲ್ಲರೂ ಒಟ್ಟುಗೂಡಿ ಸಸಿ ನೆಟ್ಟು ನೀರೆರೆದರು. ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಉಪಾಧ್ಯಕ್ಷ ಪ್ರಸಾದ್, ಕೋಶಾಧ್ಯಕ್ಷ ಲಿಂಗರಾಜು, ತಾಲೂಕು ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಸದಾನಂದ, ಇನ್ನಿತರರಿದ್ದರು.