ಗುಂಡ್ಲುಪೇಟೆ: ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಜು.21ರಂದು ತಾಲೂಕು ಹಾಗೂ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ರೈತಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಗೌಡೇಗೌಡ ಹೇಳಿದರು.
ದೊಡ್ಡಹುಂಡಿ ಭೋಗಪ್ಪ ಕಾಲೇಜು ಬಳಿಯಿಂದ ಬೃಹತ್ ಟ್ರ್ಯಾಕ್ಟರ್ ರ‌್ಯಾಲಿ ಮೂಲಕ ತಾಲೂಕು ಕಚೇರಿ ಎದುರು ಸಮಾವೇಶಗೊಂಡು ಹುತಾತ್ಮ ರೈತರಿಗೆ ನಮನ ಸಲ್ಲಿಸಲಾಗುವುದು. ತಾಲೂಕು ಹಾಗೂ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತೀವ್ರ ಬರಗಾಲ ಎದುರಾಗಿದ್ದರೂ ಜಿಲ್ಲಾಡಳಿತ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಆದ್ದರಿಂದ ಸ್ಥಳಕ್ಕೆ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಸೇರಿದಂತೆ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಬಂದು ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಕೋರಲಾಗಿದೆ ಎಂದು ವಿವರ ನೀಡಿದರು.
ಸಂಘಟನೆಯ ಜಿಲ್ಲಾ ಪ್ರಧಾನಕಾರ್ಯದರ್ಶಿ ದೇಮಹಳ್ಳಿ ಪ್ರಸಾದ್, ಜಿಲ್ಲಾ ಕಾರ್ಯಾಧ್ಯಕ್ಷ ಹಂಗಳ ಮಾಧು, ತಾಲೂಕು ಅಧ್ಯಕ್ಷ ದಿಲೀಪ್, ಪ್ರಧಾನ ಕಾರ್ಯದರ್ಶಿ ಲೋಕೇಶ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.