ಗುಂಡ್ಲುಪೇಟೆ: ಏ.21ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪಟ್ಟಣಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ವೀಕ್ಷಿಸಿದರು.
ಶಾಸಕ ಗಣೇಶ ಪ್ರಸಾದ್, ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಒ ಮೊನಾರೋತ್ ಮುಂತಾದ ಅಧಿಕಾರಿಗಳ ಜತೆ ಹೆಲಿಪ್ಯಾಡ್, ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಿರ್ಮಿಸಿದ ಬೃಹತ್ ವೇದಿಕೆ ಹಾಗೂ ವಾಲ್ಮೀಕಿ ಭವನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಮಾತನಾಡಿ, ಗಣೇಶ ಪ್ರಸಾದ್ ಒತ್ತಾಸೆಯ ಮೇರೆಗೆ ಮುಖ್ಯಮಂತ್ರಿ ಹಾಗೂ ಸಂಪುಟದ ಹಲವಾರು ಸಚಿವರು ಆಗಮಿಸಿ ಕೋಟ್ಯಂತರ ರೂಪಾಯಿಗಳ ಅನುದಾನದಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಸುಮಾರು 15 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ, ಎಪಿಎಂಸಿ ಅಧ್ಯಕ್ಷ ನಾಗರಾಜು ಇತರರು ಇದ್ದರು.