ಗುಂಡ್ಲುಪೇಟೆಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ವಿಷಯದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷೃ ವಹಿಸಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ನಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಹೊರಟ ಕಾರ್ಯಕರ್ತರು, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ಎಂಸಿಡಿಸಿಸಿ ಬ್ಯಾಂಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯ ಸಣ್ಣದಲ್ಲ. ಇದೊಂದು ಹಗರಣವಾಗಿದೆ. ಅಲ್ಲದೆ ಪ್ರತಿಭಾವಂತ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ತಪ್ಪು ನಿರ್ಧಾರ ಕೈಗೊಂಡಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ನಿರ್ಲಕ್ಷೃ ವಹಿಸಿದೆ ಎಂದು ಆರೋಪಿಸಿದರು.
ನೀಟ್ ಹಗರಣದ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಪ್ರಸ್ತುತ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಾಹನಗಳ ಮಾಲೀಕರ ಜತೆಗೆ ಕೃಷಿಗೆ ಯಾಂತ್ರೀಕರಣ ನಂಬಿರುವ ರೈತರು ಚಿಂತೆಗೀಡಾಗಿದ್ದಾರೆ. ಆದ್ದರಿಂದ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು.