ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರದ ಜಿಲ್ಲಾಡಳಿತ ಭವನದ ಮುಂಭಾಗ ದಸಂಸ ಮುಖಂಡರು ಪ್ರತಿಭಟನೆ ನಡೆಸಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ವತಿಯಿಂದ ಆಕ್ರೋಶ
ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ
ಚಾಮರಾಜನಗರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಮಾತನಾಡಿ, ಕೇಂದ್ರ ಸರ್ಕಾರ ನಡೆಸುವ ನೀಟ್ ಪ್ರಶ್ನೆ ಪತ್ರಿಕೆ ಹಲವು ಬಾರಿ ಸೋರಿಕೆಯಾಗಿದ್ದು, ಕೋಟ್ಯಾಂತರ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಪರಿಣಾಮ 26 ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಖಂಡಿಸಿ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್ ನಲ್ಲಿ ಹೋರಾಟ ನಡೆಸಿದ್ದು ದಸಂಸ ವತಿಯಿಂದ ಸಂಪೂರ್ಣ ಬೆಂಬಲ ನೀಡಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದರಿಂದ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆಯನ್ನು ನೀಡಬೇಕು. ಜಂತರ್ ಮಂತರ್ ನಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವುದನ್ನು ಸೂಕ್ತ ತನಿಖೆ ನಡೆಸಬೇಕು. ಇದರಲ್ಲಿ ಕೇಂದ್ರ ಸರ್ಕಾರದ ವೈಫಲ್ಯವಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವರು ರಾಜೀನಾಮೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಸಂಸ ಪದಾಧಿಕಾರಿಗಳಾದ ರಂಗಸ್ವಾಮಿ, ರವಿಕುಮಾರ್, ಆಟೋ ಉಮೇಶ್, ಪ್ರಕಾಶ್, ನಂಜಮ್ಮ, ಲಕ್ಷ್ಮಮ್ಮ, ಪಾರ್ವತಮ್ಮ ಹಾಗೂ ಇತರರು ಹಾಜರಿದ್ದರು.