ಹನೂರು: ಪ್ರತಿಯೊಬ್ಬರೂ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುವುದರ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸೂಚಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಸಂಜೆ ಆಡಳಿತಾಧಿಕಾರಿಯೂ ಆದ ತಹಸೀಲ್ದಾರ್ ಕೆ.ಎನ್.ಚೈತ್ರಾ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ವಿಷಯ ಮಂಡಿಸಿದ ಬಳಿಕ ಮಾತನಾಡಿದರು.
ಹನೂರು ಪಟ್ಟಣ ಅಭಿವೃದ್ಧಿಯಾಗಬೇಕಿದೆ. ಕಚೇರಿಗೆ ಆಗಮಿಸುವ ಸಾರ್ವಜನಿಕರ ಸಮಸ್ಯೆಗಳು ಇತ್ಯರ್ಥವಾಗುವುದರ ಮೂಲಕ ಉತ್ತಮ ಸೇವೆ ಒದಗಿಸಬೇಕು. ಆದರೆ ಕೆಲವು ನೌಕರರು ಸರಿಯಾಗಿ ಕೆಲಸ ನಿರ್ವಹಿಸದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ವಾರ್ಡ್‌ಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಕೆಲಸವಾಗಬೇಕು. ದಕ್ಷತೆಯಿಂದ ಕೆಲಸ ನಿರ್ವಹಿಸಬೇಕು. ಈ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸೂಚಿಸಿದರು.
ಇನ್ನು ಸಭೆಯಲ್ಲಿ ಮಂಡಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಬೇಕು. ಕೈಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ತೆರಳಿ ಪರಿಶೀಲಿಸಬೇಕು. ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಈಗಾಗಲೇ ಉದ್ಧೇಶಿಸಿರುವ ಅಡುಗೆ ಮನೆ, ಶೌಚಗೃಹದ ಪೂರ್ಣ ಪ್ರಮಾಣದಲ್ಲಿ ಆಗಬೇಕು. ಪಾದಚಾರಿ ಮಾರ್ಗದೆಲ್ಲಿನ ತಳ್ಳುಗಾಡಿಗಳನ್ನು ತೆರೆವುಗೊಳಿಸುವುದರ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ವಾಣಿಜ್ಯ ಮಳಿಗೆಗಳಿಂದ ಬಾಡಿಗೆ ಹಾಗೂ ಕಂದಾಯ ವಸೂಲಾತಿಗೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚಿಸಿದರು.
ಇದೇ ವೇಳೆ ಸಮರ್ಪಕವಾಗಿ ಕೆಲಸ ನಿರ್ವಹಿಸದ ನೌಕರ ಭರತ್ ಅವರನ್ನು ಶಾಸಕರು ತೀವ್ರ ತರಾಟೆಗೆ ತೆಗೆದುಕೊಂಡು ಕಟ್ಟುನಿಟ್ಟಿನ ಸೂಚನೆ ನೀಡಿದರು. ಈಗಾಗಲೇ ನಿರ್ಧರಿಸಿರುವ ಕೆಂಪೇಗೌಡ ವೃತ್ತ ನಾಮಕರಣದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಕೆ.ಶಿಫ್ ಅಧಿಕಾರಿಗಳಿಗೆ ರಸ್ತೆ ನಿರ್ವಹಣೆಯ ಸಮಸ್ಯೆಯನ್ನು ಬಗೆಹರಿಸುವಂತೆ ತಿಳಿಸಲಾಯಿತು.
ತಹಸೀಲ್ದಾರ್ ಕೆ.ಎನ್.ಚೈತ್ರಾ, ಪಪಂ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜು, ಸಮುದಾಯ ಸಂಘಟನಾಧಿಕಾರಿ ಚಂದ್ರಕುಮಾರ್, ಆರೋಗ್ಯಾಧಿಕಾರಿ ಪ್ರಕಾಶ್ ಹಾಗೂ ಕಚೇರಿ ನೌಕರರು ಇದ್ದರು.