ಗುಂಡ್ಲುಪೇಟೆ ತಾಲೂಕು ಕಚೇರಿ ಮುಂದೆ ರೈತರ ಕೃಷಿ ಸಮಸ್ಯೆ ಹಾಗೂ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಗುಂಡ್ಲುಪೇಟೆ ತಾಲೂಕಿನ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ
ಗುಂಡ್ಲುಪೇಟೆ:
ತಾಲೂಕಿನ ಕೃಷಿಕರ ಸಮಸ್ಯೆ ಹಾಗೂ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಸಂಘಟನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡು ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ಸಂಘಟನೆ ಜಿಲ್ಲಾಧ್ಯಕ್ಷ ಮಹದೇವಪ್ಪ ಮಾತನಾಡಿ, ತಾಲೂಕಿನಲ್ಲಿ ಮಳೆ ಕೊರತೆ, ಅಂತರ್ಜಲ ಕುಸಿತ, ಕಾಡು ಪ್ರಾಣಿಗಳ ಹಾವಳಿ ಹಾಗೂ ಕೃಷಿ ಸಮಸ್ಯೆಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರದ ರೈತ ವಿರೋಧಿ ನೀತಿಗಳಿಂದ ರೈತರು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ 10 ತಿಂಗಳ ಹಿಂದೆಯೇ ಜಿಲ್ಲಾಡಳಿತ ಮತ್ತು ಸರ್ಕಾರದ ಗಮನಕ್ಕೆ ಹಲವು ಸಮಸ್ಯೆಗಳನ್ನು ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಅರಣ್ಯ ಇಲಾಖೆಯಿಂದ ರೈತರಿಗೆ ತುಂಬ ತೊಂದರೆಯಾಗುತ್ತಿದೆ. ತಾಲೂಕಿನಲ್ಲಿ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳಿಗೆ ಮೇವು ಒದಗಿಸಿಕೊಡಬೇಕು. ಮಳೆ, ಗಾಳಿಗೆ ಬಾಳೆ ಫಸಲು ನಾಶವಾಗಿ ತಿಂಗಳುಗಳೇ ಉರುಳಿದರೂ ಇನ್ನೂ ಯಾವುದೇ ಪರಿಹಾರ ನೀಡಿಲ್ಲ ಎಂದು ದೂರಿದರು.
ಗುಂಡ್ಲುಪೇಟೆ ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಬೇಕು. ಬೆಳೆ ನಷ್ಟ ಪರಿಹಾರ ಹಾಗೂ ಬೆಳೆ ವಿಮೆ ಹಣವನ್ನು ತಕ್ಷಣ ರೈತರ ಖಾತೆಗೆ ಜಮಾ ಮಾಡಬೇಕು. ನಾಲ್ಕನೇ ಹಂತದ ಏತ ನೀರಾವರಿ ಯೋಜನೆಯ ಎಲ್ಲ ಕೆರೆಗಳಿಗೆ ಕೂಡಲೇ ನೀರು ಹರಿಸಬೇಕು. ಅಕ್ರಮ-ಸಕ್ರಮ ಯೋಜನೆಯಡಿ ಬಾಕಿ ಇರುವ ಸಾಗುವಳಿ ಹಕ್ಕುಪತ್ರಗಳನ್ನು ವಿತರಿಸಬೇಕು. ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಿ ಬೆಳೆ ಹಾಗೂ ಪ್ರಾಣಹಾನಿಗೆ ಸೂಕ್ತ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವಂತೆ ತಹಸೀಲ್ದಾರ್ ಎಂ.ಎಸ್.ತನ್ಮಯ್ ಅವರಿಗೆ ಮನವಿ ಪತ್ರ ನೀಡಿದರು.
ಸಂಘಟನೆ ಜಿಲ್ಲಾ ಕಾರ್ಯಾಧ್ಯಕ್ಷ ಕುಮಾರ್, ಜಿಲ್ಲಾ ಉಪಾಧ್ಯಕ್ಷ ರಾಜಶೇಖರಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹದೇವಸ್ವಾಮಿ, ಸೋಮಶೇಖರ್, ತಾಲೂಕು ಅಧ್ಯಕ್ಷ ಶಿವಣ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಮಹದೇವಪ್ರಸಾದ್, ಗೌರವಾಧ್ಯಕ್ಷ ನಾಗರಾಜಪ್ಪ, ಸಿದ್ದಶೆಟ್ಟಿ, ಮಹಿಳಾ ಘಟಕದ ಅಧ್ಯಕ್ಷೆ ಬಸಮ್ಮ, ಚಿಕ್ಕಸಿದ್ದಮ್ಮ, ತಾಲೂಕು ಯುವ ಘಟಕದ ಅಧ್ಯಕ್ಷ ಪ್ರವೀಣ್, ಪ್ರಧಾನ ಕಾರ್ಯದರ್ಶಿ ರಘು ಇತರರು ಇದ್ದರು. ಸ