ಜಿಲ್ಲೆಯ 47 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿದರು. ಮೋನಾರೋತ್, ಎಂ.ಮುತ್ತುರಾಜ್ ಹಾಜರಿದ್ದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿದರು. ಮೋನಾರೋತ್, ಎಂ.ಮುತ್ತುರಾಜ್ ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಶ್ರೀರೂಪಾ ಮಾಹಿತಿ
  • ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ
  • ಪರೀಕ್ಷೆ ಬರೆಯಲಿರುವ ಒಟ್ಟು 12128 ವಿದ್ಯಾರ್ಥಿಗಳು
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಮಾತನಾಡಿದರು. ಮೋನಾರೋತ್, ಎಂ.ಮುತ್ತುರಾಜ್ ಹಾಜರಿದ್ದರು.
ಚಾಮರಾಜನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಇದೇ ಮಾ.18ರಿಂದ ಏ.2ರವರೆಗೆ ನಡೆಯಲಿದ್ದು, ಪಾರದರ್ಶಕ ಪರೀಕ್ಷಾ ಪ್ರಕ್ರಿಯೆಗೆ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿದರು. ಜಿಲ್ಲೆಯಲ್ಲಿ 6170 ಬಾಲಕರು, 5958 ಬಾಲಕಿಯರು ಸೇರಿದಂತೆ ಒಟ್ಟು 12128 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳು 11249, ಖಾಸಗಿ ಅಭ್ಯರ್ಥಿಗಳು 288, ಪುನರಾವರ್ತಿತ ವಿದ್ಯಾರ್ಥಿಗಳು 566, ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು 25 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ. ಅಲ್ಲದೆ ವಿಶೇಷ ಅಗತ್ಯವುಳ್ಳ 68 ಬಾಲಕರು, 31 ಬಾಲಕಿಯರು ಸಹ ಪರೀಕ್ಷೆ ಬರೆಯಲಿದ್ದಾರೆ ಎಂದರು.
ಚಾಮರಾಜನಗರ ತಾಲೂಕಿನಲ್ಲಿ 15, ಗುಂಡ್ಲುಪೇಟೆ 10, ಹನೂರು 9, ಕೊಳ್ಳೇಗಾಲ 9, ಯಳಂದೂರು 4 ಸೇರಿದಂತೆ 47 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಮತ್ತು ವೆಬ್ ಕಾಸ್ಟಿಂಗ್ ಗೆ ಪೂರ್ವ ಸಿದ್ದತೆ ಕೈಗೊಂಡಿದು, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವೆಬ್ ಕಾಸ್ಟ್ ಸಂಬಂಧ ಜಿಲ್ಲಾ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ಪ್ರತಿದಿನ ವೇಳಾ ಪಟ್ಟಿಯಂತೆ 19 ನಿಗದಿತ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬೆಂಗಾವಲಿನಲ್ಲಿ ಸರಬರಾಜು ಮಾಡಲಾಗುತ್ತದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಆಸುಪಾಸಿನ ಜೆರಾಕ್ಸ್ ಮತ್ತು ಸೈಬರ್ ಸೆಂಟರ್ ಗಳನ್ನು ಮುಚ್ಚಿಸಲು ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಪ್ರದೇಶಗಳ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸರಬರಾಜಿಗೆ ಸೆಸ್ಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಪರೀಕ್ಷಾ ದಿನಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿಗಮಕ್ಕೆ ಸೂಚಿಸಲಾಗಿದೆ. ಹೆಚ್ಚುವರಿ ಮಾರ್ಗಗಳಿಗೆ ಅಗತ್ಯ ಪ್ರಮಾಣದಲ್ಲಿ ಬಸ್ಸುಗಳನ್ನು ಒದಗಿಸಲು ಸಹ ತಿಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಇಲಾಖೆಯಿಂದ ಶುಶ್ರೂಷಕಿಯರನ್ನು ಔಷದೋಪಚಾರಗಳಿಗೆ ನೇಮಕ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ತೆರೆಯಲಾಗಿದ್ದ ಸಹಾಯವಾಣಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊರ ಜಿಲ್ಲೆಯಿಂದಲೂ ವಿದ್ಯಾರ್ಥಿಗಳು ಶಿಕ್ಷಕರನ್ನು ಸಹಾಯವಾಣಿ ಮೂಲಕ ಸಂಪರ್ಕಿಸಿದ್ದಾರೆ. 2025-26ನೇ ಸಾಲಿನಲ್ಲಿ ಎರಡು ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ಇಚ್ಚಿಸಿದ್ದಲ್ಲಿ ಎರಡನೇ ಪರೀಕ್ಷೆಗೂ ಹಾಜರಾಗಬಹುದು. ಉತ್ತಮ ಸಾಧನೆ ಮಾಡಿದ ಅಂಕವನ್ನು ಪರಿಗಣಿಸಿ ಫಲಿತಾಂಶ ಘೋಷಿಸಲಾಗುವುದು ಎಂದರು.
ವಿದ್ಯಾರ್ಥಿಗಳು ಯಾವುದೇ ಗೊಂದಲ ಆತಂಕಕ್ಕೆ ಒಳಗಾಗದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪುನರಾವರ್ತನೆ, ಪುನರ್ ಅಭ್ಯಾಸ ಮಾಡಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಪೋಷಕರು ಸಹ ಮಕ್ಕಳಿಗೆ ಉತ್ತೇಜನ ನೀಡಿ ಪರೀಕ್ಷೆಯನ್ನು ಒತ್ತಡರಹಿತವಾಗಿ ಬರೆಯಲು ಪೂರಕವಾದ ವಾತಾವರಣ ಕಲ್ಪಿಸಬೇಕು. ಪರೀಕ್ಷಾ ಪಾವಿತ್ರ್ಯತೆ ಹಾಗೂ ಗೌಪ್ಯತೆ ಕಾಪಾಡಲು ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆ ಫಲಿತಾಂಶದ ಮೊದಲ ಐದು ಅಗ್ರ ಸ್ಥಾನಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಇದ್ದಾರೆ. ಹೀಗಾಗಿ ಈ ಬಾರಿ ಮುಖ್ಯ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಹಾಡಿ ಗಿರಿಜನ ಪ್ರದೇಶಗಳ ವಿದ್ಯಾರ್ಥಿಗಳು ಪರೀಕ್ಷೆಗೆ ಸಜ್ಜಾಗಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಮಾತನಾಡಿ, ಜಿಲ್ಲೆಯಲ್ಲಿರುವ 47 ಪರೀಕ್ಷಾ ಕೇಂದ್ರಗಳಿಗೂ ಸೂಕ್ತ ಬಂದೋ ಬಸ್ತ್ ಮಾಡಲಾಗಿದೆ. ಗೌಪ್ಯ ಸಾಮಗ್ರಿಗಳ ವಿತರಣಾ ಮಾರ್ಗಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಪರೀಕ್ಷಾ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದಾದ ಸುಳ್ಳು ಸುದ್ದಿ ವದಂತಿಗಳಿಗೆ ಕಿವಿಗೊಡಬಾರದು. ಸಾಮಾಜಿಕ ಜಾಲತಾಣಗಳ ಮೇಲೆ ವಿಶೇಷವಾಗಿ ನಿಗಾ ಇಡಲಾಗುತ್ತದೆ. ವದಂತಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟಿಲ್, ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net