ಹನೂರು:ಗ್ರಾಮಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.
ಹನೂರಿನ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಎಲ್ಲ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಅವರ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ನಿರ್ದೇಶನ ನೀಡಲಾಗಿದೆ. ಸಿಎಂ ಅವರು ಸಭೆಯಲ್ಲಿ ಸೂಚಿಸಿದ ಮಾರ್ಗಸೂಚಿಯನ್ನು ಅಧಿಕಾರಿಗಳಿಗೆ ತಿಳಿಸಿ ಅಗತ್ಯ ಕ್ರಮವಹಿಸುವಂತೆ ಸೂಚಿಸಲಾಗುವುದು ಎಂದರು.
ಹನೂರು ತಾಲೂಕಿನಲ್ಲಿ 21 ಗ್ರಾಮ ಪಂಚಾಯಿತಿ ವ್ಯಾಪ್ತಿಯ 39 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೆಲವೊಂದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ ಇನ್ನುಳಿದ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಮೂಲಕ ನೀರು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮಳೆಯಿಲ್ಲದ ಪರಿಣಾಮ ಆವರಿಸಿರುವ ಬರಗಾಲದ ಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜವರೇಗೌಡ, ಎಸಿ ದಿನೇಶ್ ಕುಮಾರ್ ಮೀನಾ, ತಹಸೀಲ್ದಾರ್ ಕೆ.ಎನ್ ಚೈತ್ರಾ, ತಾಪಂ ಇಒ ಉಮೇಶ್ ಹಾಗೂ ಇನ್ನಿತರರಿದ್ದರು.