ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹನೂರಿನಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಯಿತು. ಚಂಗಡಿ ಕರಿಯಪ್ಪ, ಮಾದಪ್ಪ, ಅಮೋಘ್, ಪ್ರಕಾಶ್ ಇತರರಿದ್ದರು.
ಹನೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪೆಟ್ರೋಲ್ ಬಂಕ್ ಬಳಿ ಜಮಾಯಿಸಿದ್ದ ನೂರಾರು ರೈತರು ಮೆರವಣಿಗೆ ಮೂಲಕ ಮುಖ್ಯ ರಸ್ತೆಯಲ್ಲಿ ಸಾಗಿ ತಹಸೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದರು. ಈ ವೇಳೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಹನೂರು ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಆದ್ದರಿಂದ ಈಗಾಗಲೇ ನಿರ್ಧರಿಸಿರುವ ಗುಂಡಾಲ್ ಜಲಾಶಯದಿಂದ ಹುಬ್ಬೆಹುಣಸೆ ಕೆರೆ ಹಾಗೂ ತಾಲೂಕಿನ ಎಲ್ಲ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಿಸಬೇಕು. ಮಲೆಮಹದೇಶ್ವರ ಬೆಟ್ಟ ತಪ್ಪಲಿನ ಕುಗ್ರಾಮಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ತಾಲೂಕಿನ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಜಾನುವಾರುಗಳು ಸೇರಿದಂತೆ ಸಾಕು ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ ಬರದಂತೆ ಸೂಕ್ತ ಚಿಕಿತ್ಸೆ ನೀಡಬೇಕು. ಸಫಾರಿಯಿಂದಾಗಿ ಕಾಡು ಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಇದರಿಂದ ರೈತರು ತುಂಬ ಸಮಸ್ಯೆ ಎದುರಿಸುತ್ತಿದ್ದಾರೆ. ಆದ್ದರಿಂದ ಸಫಾರಿಯನ್ನು ಸ್ಥಗಿತಗೊಳಿಸಬೇಕು. ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಉಪ ನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಜನರಿಂದ ಹಣ ವಸೂಲಾತಿಗೆ ಕಡಿವಾಣ ಹಾಕಬೇಕು. ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಕಂಡಯ್ಯನಪಾಳ್ಯದ ಪ್ರಕಾಶ್ ಎಂಬುವರು ಜಮೀನಿಗೆ ತೆರಳಲು ದಾರಿ ತೆರವುಗೊಳಿಸದಿದ್ದಲ್ಲಿ ವಿಷ ಕುಡಿಯುವುದಾಗಿ ಎಚ್ಚರಿಸಿದರು. ಬಹುತೇಕ ರೈತರು ಅನುಭವಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಹೇಳಿಕೊಂಡರು.
ಮಾಹಿತಿ ತಿಳಿದು ಸ್ಥಳಕ್ಕೆ ತಹಸೀಲ್ದಾರ್ ಕೆ.ಎನ್ ಚೈತ್ರಾ, ಎಸಿಎಫ್‌ಗಳಾದ ವಿರಾಜ್ ಹೊಸೂರ್, ಶಿವರಾಜು, ಉಪ ನೋಂದಣಾಧಿಕಾರಿ ಉಷಾ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು ಆಗಮಿಸಿ ಸಮಸ್ಯೆ ಆಲಿಸಿದರು. ಈ ವೇಳೆ ರೈತರು ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೇಡಿಕೆ ಹಾಗೂ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಳಿಕ ಆಯಾ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಆದರೂ ಸ್ಥಳಕ್ಕೆ ಜಿಲ್ಲಾಧಿಕಾರಿ ಅವರು ಆಗಮಿಸುವಂತೆ ರೈತರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಚಂಗಡಿ ಕರಿಯಪ್ಪ, ಶ್ರೀನಿವಾಸ್, ಪ್ರಕಾಶ್, ಅಮೋಘ್, ನಾರಾಯಣ, ಭೈರನತ್ತ ರಾಜು ಇನ್ನಿತರರು ಇದ್ದರು.