ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಿ

ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಗಣೇಶ್ ಪ್ರಸಾದ್ ಮಾತನಾಡಿದರು. ತನ್ಮಯಿ, ಷಣ್ಮುಖ, ಶಶಿಧರ್ ಇದ್ದರು.
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಗಣೇಶ್ ಪ್ರಸಾದ್ ಮಾತನಾಡಿದರು. ತನ್ಮಯಿ, ಷಣ್ಮುಖ, ಶಶಿಧರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಾಪಂ ಅಧಿಕಾರಿಗಳಿಗೆ ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ಸೂಚನೆ
  • ವಿಪತ್ತು ನಿರ್ವಹಣಾ ಸಮಿತಿ ಸಭೆ
ಗುಂಡ್ಲುಪೇಟೆ: ಇತ್ತೀಚೆಗೆ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಗ್ರಾಮಪಂಚಾಯಿತಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಸೂಚನೆ ನೀಡಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ವಿಪತ್ತು ನಿರ್ವಹಣಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಕುಡಿಯುವ ನೀರಿನ ತುರ್ತು ನಿರ್ವಹಣೆಗ ಸರ್ಕಾರ 1 ಕೋಟಿ ರೂಪಾಯಿ ಅನುದಾನ ನೀಡಿದ್ದು ತುಂಬ ಅವಶ್ಯಕತೆಯಿರುವ ಗ್ರಾಮಗಳಿಗೆ ಹೊಸದಾಗಿ ಕೊಳವೆಬಾವಿ ಕೊರೆಸಲಾಗುವುದು. ಸಣ್ಣಪುಟ್ಟ ಕೊರತೆಗಳಿದ್ದರೆ ರೀಡ್ರಿಲ್ ಮಾಡುವ ಇಲ್ಲವೇ ಆಳಕ್ಕೆ ಪೈಪ್ ಇಳಿಸುವ ಮೂಲಕ ನೀರು ಸರಬರಾಜು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಕಣ್ಣೇಗಾಲ, ಮಂಗಲ, ಹಂಗಳ, ಶಿವಪುರ, ಹೊರೆಯಾಲ, ಕೆಲಸೂರು, ಹುಂಡೀಪುರ, ಬೊಮ್ಮನಹಳ್ಳಿ, ವಡ್ಡಗೆರೆ ಮುಂತಾದ ಹತ್ತಾರು ಗ್ರಾಮಪಂಚಾಯಿತಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಕೊಳವೆಬಾವಿಗಳಲ್ಲಿ ನೀರು ದೊರಕದೆ ಎದುರಾಗಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಸದ್ಯ ಜಲಜೀವನ್ ಮಿಷನ್ ಯೋಜನೆಯಲ್ಲಿ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದು ತಾಂತ್ರಿಕ ಕಾರಣದಿಂದ ಸಮಸ್ಯೆ ಎದುರಾದರೆ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರಿನ ಸರಬರಾಜು ಸಂಪೂರ್ಣ ಬಂದ್ ಆಗುತ್ತಿದೆ ಎಂದು ಮಾಹಿತಿ ನೀಡಿದರು.

ಮಂಗಲ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ ಮಾತನಾಡಿ, ತಮ್ಮ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಅಂತರ್ಜಲ ದೊರಕದಂತಾಗಿದೆ. ಹಾಡಿಪೋಡಿಗಳಿಗೆ ಟ್ಯಾಂಕರ್ ಮೂಲಕವೂ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಹೊಸದಾಗಿ ಕೊಳವೆಬಾವಿ ಕೊರೆಸಬೇಕು ಎಂದು ಮನವಿ ಮಾಡಿದರು.

ಸಾಮಾನ್ಯವಾಗಿ ಪ್ರತಿಯೊಬ್ಬರೂ ತಮ್ಮ ಗ್ರಾಮದ ವಾಟರ್‌ಮನ್‌ಗಳು ಉದ್ದೇಶಪೂರ್ವಕವಾಗಿ ಸರಿಯಾಗಿ ನೀರು ಬಿಡುತ್ತಿಲ್ಲ. ಅಲ್ಲದೆ ಗ್ರಾಮಪಂಚಾಯಿತಿಗಳಲ್ಲಿ ಶುಚಿತ್ವದ ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ಸಾರ್ವಜನಿಕರು ದೂರುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಹೋಬಳಿ ಕೇಂದ್ರವಾದ ಬೇಗೂರಿನಲ್ಲಿಯೂ ಶುಚಿತ್ವದ ಕೊರತೆಯಿದೆ. ಆದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ಬಗ್ಗೆ ಜಾಗ್ರತೆ ವಹಿಸಬೇಕು. ಅಕಸ್ಮಾತ್ ಕೊಳವೆಬಾವಿಗಳಲ್ಲಿ ನೀರು ಲಭ್ಯವಿಲ್ಲದಿದ್ದರೆ ಮಾತ್ರ ಹೊಸದಾಗಿ ಕೊಳವೆಬಾವಿ ಕೊರೆಸಲು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಾಸಕರು ಹೇಳಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶಾ ಮಾತನಾಡಿ, ಜುಲೈ ತಿಂಗಳನ್ನು ‘ಡೆಂಘೆ ವಿರೋಧಿ ಮಾಸಾಚರಣೆ’ಯಾಗಿ ಆಚರಿಸಲಾಗುತ್ತಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಉಪಕೇಂದ್ರಗಳು ಹಾಗೂ ಗ್ರಾಮ ಮಟ್ಟದಲ್ಲಿ ಲಾರ್ವಾ ಸಮೀಕ್ಷೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಲಾಗುತ್ತಿದೆ. ಈ ತೀವ್ರ ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಕಳೆದ ಮೂರು ತಿಂಗಳಿಂದ ತಾಲೂಕಿನಲ್ಲಿ ಯಾವುದೇ ಡೆಂಘೆ ಪ್ರಕರಣಗಳು ದಾಖಲಾಗಿಲ್ಲ. ಮುಂದೆಯೂ ಸಹ ಯಾವುದೇ ರೋಗಗಳ ಹರಡುವಿಕೆ ಆಗದಂತೆ ಕ್ರಮವಹಿಸಲಾಗುವುದು ಎಂದು ವಿವರಿಸಿದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ತಾಲೂಕಿನ ಸಾರ್ವಜನಿಕರ ಆರೋಗ್ಯ ಕಾಪಾಡಲು ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಸಹಕಾರ ನಿಡಬೇಕು. ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಕೆ, ನೀರಿನ ತೊಟ್ಟಿಗಳನ್ನು ನಿಯಮಿತವಾಗಿ ಶುಚಿಗೊಳಿಸಿ, ಕಡ್ಡಾಯವಾಗಿ ಕ್ಲೋರಿನೇಷನ್ ಮಾಡಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಂಡು, ಪರಿಸರ ನೈರ್ಮಲ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕು. ತಾಲೂಕನ್ನು ರೋಗಮುಕ್ತ ಮತ್ತು ಆರೋಗ್ಯಕರ ತಾಲೂಕನ್ನಾಗಿ ಮಾಡಲು ಪ್ರತಿಯೊಬ್ಬ ಅಧಿಕಾರಿಯೂ ಮತ್ತು ಸಾರ್ವಜನಿಕರೂ ಪೂರ್ಣ ಪ್ರಮಾಣದಲ್ಲಿ ಸಹಕರಿಸಬೇಕು ಎಂದು ಸೂಚನೆ ನೀಡಿದರು.

ತಹಸೀಲ್ದಾರ್ ಎಂ.ಎಸ್.ತನ್ಮಯಿ, ತಾಲೂಕು ಪಂಚಾಯಿತಿ ಇಒ ಷಣ್ಮುಖ, ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್, ಸೆಸ್ಕ್ ಎಇಇ ಕೆ.ಎಂ.ಸಿದ್ದಲಿಂಗಪ್ಪ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಾದೇಶ್, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ ಸೇರಿದಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಕುಡಿಯುವ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net