ಯಳಂದೂರು: ಕುಡಿಯುವ ನೀರಿನ ವಿಚಾರ ಸಂಬಂಧ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗ್ರಾಮಸ್ಥರು ೇರಾವ್ ಹಾಕಿದ್ದ ಹಿನ್ನೆಲೆಯಲ್ಲಿ ಬುಧವಾರ ಬೂದಿತಿಟ್ಟು ಗ್ರಾಮಕ್ಕೆ ತಾಲೂಕು ಪಂಚಾಯಿತಿ, ಕುಡಿಯುವ ನೀರು ನೈರ್ಮಲ್ಯ, ಪಂಚಾಯತ್ ರಾಜ್, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಟಡಿಎಸ್ ಹೆಚ್ಚಿದ್ದು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಗ್ರಾಮಸ್ಥರು ಮಂಗಳವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಘೇರಾವ್ ಹಾಕಿದ್ದರು. ಮಾಹಿತಿ ತಿಳಿದ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿ ನಿವಾಸಿಗಳೊಂದಿಗೆ ಚರ್ಚಿಸಿದರು.
ಪಂಚಾಯತ್ ರಾಜ್ ನೀರಾವರಿ ಇಲಾಖೆ ಇಇ ಇಮ್ಯಾನುಯಲ್ ಸಂತೋಷ್‌ಕುಮಾರ್ ಮಾತನಾಡಿ, ಗ್ರಾಮದಲ್ಲಿ ಪಂಚಾಯಿತಿಯಿಂದ ಖಾಲಿ ನಿವೇಶನ ನೀಡಿದರೆ ನಮ್ಮ ಇಲಾಖೆ ವತಿಯಿಂದ ಆರ್‌ಒ ಘಟಕವನ್ನು ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಬಳಿ ಇರುವ ಸ್ಥಳವನ್ನು ಪರಿಶೀಲನೆ ಮಾಡಲಾಗಿದೆ. ಇಲ್ಲಿನ ಕುಡಿಯುವ ನೀರಿನ ಮಾದರಿ ಪಡೆಯಲಾಗಿದ್ದು ಇದನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.
ತಾಪಂ ನರೇಗಾ ಸಹಾಯಕ ನಿರ್ದೇಶಕ ರವೀಂದ್ರ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕೂಡಲೇ ಒಂದು ಕೊಳವೆ ಬಾವಿ ಕೊರೆಸಲು ಕ್ರಮ ವಹಿಸಲಾಗುವುದು. ಇಲ್ಲಿರುವ ನೀರಿನ ತೊಂಬೆಗಳ ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು. ನರೇಗಾ ಯೋಜನೆಯಡಿ ಹಲವು ಕಾಮಗಾರಿಗಳಲ್ಲಿ ಲೋಪವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇದನ್ನು ಪರಿಗಣಿಸಿ ಸ್ಥಳ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು. ಗ್ರಾಮದಲ್ಲಿ ಶುಚಿತ್ವದ ಬಗ್ಗೆ ಅಸಮಧಾನವಿದ್ದು ಇದನ್ನು ಸರಿಪಡಿಸಲು ಕ್ರಮ ವಹಿಸಲಾಗುವುದು. ಅಲ್ಲದೆ, ಪಿಡಿಒ ನಟರಾಜು ವಿರುದ್ಧ ಹಲವರು ದೂರು ನೀಡಿದ್ದಾರೆ. ಇದನ್ನೆಲ್ಲ ಕೂಲಂಕಷವಾಗಿ ಪರಿಶೀಲಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗುವುದು ಎಂದು ಭರವಸೆ ನೀಡಿದರು.