ಗುಂಡ್ಲುಪೇಟೆ: ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ತಾಲೂಕು ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾರಿಗೆ ಬಸ್ ನಿಲ್ದಾಣದ ಮಾರ್ಗವಾಗಿ ಸಾಗಿ ತಾಲೂಕು ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳ ಅವಧಿಯಲ್ಲಿ ಜನಸಾಮಾನ್ಯರ ದಿನಬಳಕೆಯ 200ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿ ದಾಖಲೆ ನಿರ್ಮಿಸಿ, ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ. ಬಡವರು, ರೈತರು ಹಾಗೂ ಕಾರ್ಮಿಕರ ಪರ ಸರ್ಕಾರ ಎಂದು ಹೇಳಿಕೊಂಡು ಐದು ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್, ಮತ್ತೊಂದೆಡೆ ಬೆಲೆ ಏರಿಕೆ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದರೆ ಹಲವು ವಸ್ತುಗಳ ಬೆಲೆ ಮೂರು ಪಟ್ಟು ಹೆಚ್ಚಾಗಿದ್ದು, ಜನಸಾಮಾನ್ಯರು ಬದುಕು ಕಷ್ಟವಾಗಿದೆ. ಶಕ್ತಿ ಯೋಜನೆಯಿಂದ ತೀವ್ರ ನಷ್ಟದಲ್ಲಿರುವ ಸರ್ಕಾರ ಸಾರಿಗೆ ಸಂಸ್ಥೆಗೆ ಅನುದಾನ ನೀಡದೆ ಬಸ್‌ಗಳ ನಿರ್ವಹಣೆಗೂ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅವು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿವೆ. ಗೃಹಲಕ್ಷ್ಮಿ, ಯುವನಿಧಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನಿರಂಜನ್‌ಕುಮಾರ್ ಆರೋಪಿಸಿದರು.
ಅಭಿವೃದ್ಧಿ ಮರೀಚಿಕೆ: ತಾಲೂಕಿನಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲದಂತಾಗಿದ್ದು, ಕಮಿಷನ್‌ಗಾಗಿ ಯಾವುದೇ ಕಾಮಗಾರಿಯನ್ನಾದರೂ ಕೇವಲ ನಿರ್ಮಿತಿ ಕೇಂದ್ರ ಹಾಗೂ ಲ್ಯಾಂಡ್ ಆರ್ಮಿ ಮೂಲಕ ನಿರ್ವಹಿಸಲಾಗುತ್ತಿದೆ. ಅಲ್ಲದೆ ಗಣೇಶೋತ್ಸವದ ಹೆಸರಿನಲ್ಲಿ 30 ಲಕ್ಷ ರೂ. ಖರ್ಚು ಮಾಡಿರುವುದಾಗಿ ಹೇಳಿಕೊಳ್ಳುವ ಶಾಸಕರು, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಮುಂದಾಗುತ್ತಿಲ್ಲ. ಕೆರೆಗಳಿಗೆ ನೀರು ಹಾಗೂ ರೈತರಿಗೆ ಸಾಗುವಳಿ ವಿತರಣೆಯಲ್ಲಿ ಶಾಸಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ನಿರಂಜನ್ ಕುಮಾರ್ ಆರೋಪಿಸಿದರು.
ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸುವ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮಾಜಿ ಅಧ್ಯಕ್ಷರಾದ ಎಲ್ ಸುರೇಶ್, ಡಿ.ಪಿ.ಜಗದೀಶ್, ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಕೊಡಸೋಗೆ ಶಿವಪ್ರಸಾದ್, ಅಗತಗೌಡನಹಳ್ಳಿ ಬಸವರಾಜು, ಹನುಮಂತಶೆಟ್ಟಿ, ಯುವಘಟಕದ ಜಿ.ಎಸ್.ಶಿವಪ್ರಸಾದ್, ಡಾ.ನವೀನ್ ಮೌರ್ಯ, ಎಸ್.ಸಿ.ಮಂಜುನಥ್, ಪ್ರಣಯ್, ಮಂಗಳಮ್ಮ, ಗೀತಾ, ಸುನೀಲ್ ಮೂಡ್ಲು, ಮಲ್ಲೇಶ್, ನಾಗುಸ್ವಾಮಿ, ನಮೋ ಮಂಜು, ಮಹೇಂದ್ರ ಇತರರು ಇದ್ದರು.