ಜಿಲ್ಲೆಯ ಚಾಮರಾಜನಗರ, ಹನೂರು, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಬಿಸಿಲಿನ ತಾಪಮಾನಕ್ಕೆ ಜನ-ಜಾನುವಾರುಗಳು ತತ್ತರಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಕೆರೆ, ಕಾಲುವೆಗಳಲ್ಲಿ ನೀರಿನ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಕೊರತೆ ಉಂಟಾಗುವ ಪರಿಸ್ಥಿತಿ ಎದುರಾಗಲಿದೆ ಎಂಬ ಆತಂಕ ಮನೆಮಾಡಿದೆ. ಈಗಾಗಲೇ ಜಿಲ್ಲೆಯ ವ್ಯಾಪ್ತಿಯಲ್ಲಿ ಬೆಳೆದ ಮೇವುಗಳನ್ನು ಹೊರ ಜಿಲ್ಲೆ ಮತ್ತು ರಾಜ್ಯಗಳಿಗೆ ಪೂರೈಕೆ ಮಾಡಲಾಗಿದೆ ಎಂದು ರೈತಾಪಿವರ್ಗ ಆರೋಪಿಸಿದೆ. ಕಾಡಂಚಿನ ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು, ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.