ಶಾಶ್ವತ ಪರಿಹಾರಕ್ಕೆ ಒತ್ತಾಯ

  ಹನೂರು ತಾಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಡುವಿನ ದೊಡ್ಡಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಯಿತು.
ಹನೂರು ತಾಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಡುವಿನ ದೊಡ್ಡಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಯಿತು.
Published on
ಹನೂರು : ತಾಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಡುವಿನ ದೊಡ್ಡಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಗ್ರಾಪಂ ವತಿಯಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಯಿತು.
ಅಂತರ್ಜಲ ಮಟ್ಟ ಕುಸಿತದಿಂದ ಗ್ರಾಮದಲ್ಲಿನ ತೊಂಬೆಗಳಿಗೆ ಕಳೆದ ಒಂದು ತಿಂಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಸಾಧ್ಯವಾಗದ ಕಾರಣ ಜೀವಜಲಕ್ಕೆ ಹಾಹಾಕಾರ ಎದುರಾಗಿತ್ತು. ಇದರಿಂದ ಜನರು ನೀರಿಗಾಗಿ ತೊಂದರೆ ಅನುಭವಿಸುತ್ತಿದ್ದರು. ಹಣ ನೀಡಿ ಟ್ಯಾಂಕರ್ ಮೂಲಕ ನೀರನ್ನು ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಹಲವು ಬಾರಿ ಗ್ರಾಪಂ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಮಹಿಳೆಯರು ಬುಧವಾರ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ಪಿಡಿಒ ಶಿವಣ್ಣ ಭರವಸೆ ನೀಡಿದ್ದರು.
ಅಂತೆಯೇ ಗುರುವಾರ ಗ್ರಾಮಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಯಿತು. ಜನರು ಸಾಲಿನಲ್ಲಿ ತೆರಳಿ ನೀರು ಹಿಡಿದರು. ಈ ವೇಳೆ ಶಾಶ್ವತ ಪರಿಹಾರ ಕಲ್ಪಿಸುವುದರ ಮೂಲಕ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net