ಹನೂರು: ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದಂತೆ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಡಿಸಿಎಫ್ ಭಾಸ್ಕರ್ ತಿಳಿಸಿದರು.
ತಾಲೂಕಿನ ಕೌದಳ್ಳಿ ಸಮೀಪದ ಸಂತೇಖಾನೆ ಅರಣ್ಯ ನರ್ಸರಿ ಆವರಣದಲ್ಲಿ ಸೋಮವಾರ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗ್ನಿ ಅವಘಡ ತಡೆಗಟ್ಟುವ ಸಂಬಂಧ ಆಯೋಜಿಸಿದ್ದ ಅರಿವು ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಬೇಸಿಗೆ ಆಗಮಿಸುತ್ತಿರುವುದರಿಂದ ಕಾಡಿಗೆ ಬೆಂಕಿ ಬೀಳದಂತೆ ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು. ಅರಣ್ಯ ಪ್ರದೇಶದಂಚಿನಲ್ಲಿನ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಬೇಕು. ಅರಣ್ಯ ಪ್ರದೇಶದಲ್ಲಿ ಗಸ್ತು ಹೆಚ್ಚಾಗಬೇಕು. ಕಳೆದ ವರ್ಷ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ವೇಳೆ ಅಗ್ನಿಶಾಮಕ ಸಿಬ್ಬಂದಿ ಸಹಕಾರ ನೀಡಿದ್ದಾರೆ. ಹಾಗಾಗಿ ಅರಣ್ಯ ಸಂರಕ್ಷಣೆಯಲ್ಲಿ ಇವರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಮಾತನಾಡಿ, ಅಗ್ನಿ ಅವಘಡಗಳು ಸಂಭವಿಸದಂತೆ ತಡೆಗಟ್ಟುವುದು ನಮ್ಮ ಉದ್ದೇಶ. ಈ ದಿಸೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೇಸಿಗೆ ಆಗಮಿಸುತ್ತಿರುವುದರಿಂದ ಕಾಡಿನಲ್ಲಿ ಬೆಂಕಿ ಕಾಣಿಕೊಂಡರೆ ತಕ್ಷಣ ಮಾಹಿತಿ ನೀಡಬೇಕು. ಕೂಡಲೇ ಕಾರ್ಯಪ್ರವೃತ್ತರಾಗುತ್ತೇವೆ ಎಂದರು.
ಎಸಿಎಫ್ ವಿರಾಜ್ ಹೊಸೂರ್, ಅಗ್ನಿಶಾಮಕ ಸಿಬ್ಬಂದಿ ಕಂದಸ್ವಾಮಿ, ಹರ್ಷ, ಲಿಂಗೇಶ್, ನಾಗಪ್ಪ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.