ದೇಗುಲದಲ್ಲಿ ಬೆಳಗಿನ ಜಾವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆ ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ, ಚಾಮರ ವಾದ್ಯಮೇಳ ಹಾಗೂ ಜಾಗಟೆ ಸದ್ದಿನೊಂದಿಗೆ ದೇಗುಲ ಸಮೀಪದ ನಂದನ ವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು. ಬಳಿಕ ಸ್ವಾಮಿಗೆ ಸಂಕಲ್ಪಾದಿ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಶತನಾಮ ಬಿಲ್ವಾರ್ಚನೆ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿ ಹಾಗೂ ಹಾಲಿನ ಅಭಿಷೇಕ ನೆರವೇರಿಸಿದರು. ಇನ್ನು 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ವಿವಿಧ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ ನೆರವೇರಿಸಲಾಯಿತು. ನವರತ್ನ ಕಿರೀಟಧಾರಣೆಯೊಂದಿಗೆ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ಧೂಪ, ದೀಪಧಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಈ ಮೂಲಕ ಮಾದಪ್ಪನಿಗೆ ಎಳ್ಳಾಮಾವಾಸ್ಯೆ ವಿಶೇಷ ಪೂಜೆಯನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.