

ಗುಂಡ್ಲುಪೇಟೆ: ಪ್ರತಿಯೊಬ್ಬರೂ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಹೆಗ್ಗಡಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ದೀಪಕ್ ಹೇಳಿದರು.
ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬುಧವಾರ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಆಧುನಿಕತೆ ಹೆಸರಿನಲ್ಲಿ ಹೊರಗಿನ ಮತ್ತು ಸಂಸ್ಕರಿಸಿದ ಆಹಾರ ಪದಾರ್ಥಗಳನ್ನು ಖರೀದಿಸಿ ತಿನ್ನುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಸಮಸ್ಯೆಗಳು ಕಂಡುಬರುತ್ತಿವೆ. ಮಳೆ ಮತ್ತು ಸ್ಥಳೀಯ ವಾತಾವರಣದಲ್ಲಿ ಬೆಳೆಯಲು ಅವಕಾಶ ಇರುವ ತರಕಾರಿ, ಹಣ್ಣು ಇತರ ಪದಾರ್ಥಗಳನ್ನು ಬೆಳೆದು ಸೇವಿಸಬೇಕು. ಅಪೌಷ್ಟಿಕತೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಆದ್ದರಿಂದ ಜೀವನ ನಿರ್ವಹಣೆಯಲ್ಲಿ ಆಹಾರ ಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಸ್ಥಳೀಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ವೃದ್ಧರು, ಗರ್ಭಿಣಿ, ಬಾಣಂತಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಪೌಷ್ಟಿಕ ಆಹಾರದ ಬಗ್ಗೆಯೂ ತಿಳಿವಳಿಕೆ ನೀಡಲಾಗುತ್ತಿದೆ. ಆದ್ದರಿಂದ ಅಂಗನವಾಡಿ ಕೇಂದ್ರದೊಂದಿಗೆ ಸಂಪರ್ಕದಲ್ಲಿ ಇರಬೇಕು ಎಂದು ಕಿವಿಮಾತು ಹೇಳಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ಆರ್.ಕುಮಾರ್, ಮುಖಂಡರಾದ ನಾಗೇಂದ್ರ, ನಾಗಪ್ಪ, ಪುಟ್ಟಮಾದಪ್ಪ, ಅಂಗನವಾಡಿ ಕಾರ್ಯಕರ್ತೆ ರಾಣಿ ಮತ್ತು ಗ್ರಾಮಸ್ಥರು ಹಾಜರಿದ್ದರು.