ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

17rajesh5
Published on

ಚಾಮರಾಜನಗರ : ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ಅನಿಲ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸೋಮವಾರ ಜಮಾಯಿಸಿದ ಪ್ರತಿಭಟನಾಕಾರರು ತಳ್ಳುವ ಗಾಡಿಯಲ್ಲಿ ಬೈಕ್ ಇರಿಸಿ ಮೆರವಣಿಗೆ ಮೂಲಕ ಶ್ರೀಭುವನೇಶ್ವರಿ ವೃತ್ತಕ್ಕೆ ಸಾಗಿ ಕೆಲಕಾಲ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಪ್ರತಿಯೊಂದು ಅಗತ್ಯವಸ್ತುವಿನ ಬೆಲೆ ಏರಿಕೆಯಾದಾಗಲೂ ಕೇಂದ್ರ ಸರ್ಕಾರವನ್ನು ದೂರುತ್ತಾರೆ. ಈಗ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೆಟ್ಟ ಮನಸ್ಥಿತಿಯನ್ನು ತೋರುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲು ದುಡ್ಡಿಲ್ಲ. ಹಾಗಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ಮಂತ್ರಿಯಾಗಿರುವ ಎಚ್.ಕೆ.ಪಾಟೀಲ್ ಅವರೇ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಾಗ ಪೆಟ್ರೋಲ್, ಡೀಸೆಲ್, ರಸಗೊಬ್ಬರ ಹಾಗೂ ಸಿಲಿಂಡರ್ ಬೆಲೆಯನ್ನು ಕಡಿಮೆ ಮಾಡುತ್ತೇವೆ ಎಂದು ಹೇಳುತ್ತಿದ್ದವರು ಇಂದು ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಜಾಸ್ತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಾದ ಉತ್ತರ ಪ್ರದೇಶ, ಗುಜರಾತ್, ಉತ್ತರಾಖಂಡ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಇದೆ. ಆದರೆ ಕಾಂಗ್ರೆಸ್ ಅಧಿಕಾರದಲ್ಲಿ ಇರುವ ಕರ್ನಾಟಕ, ತೆಲಂಗಾಣ, ತಮಿಳುನಾಡಿನಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ಸಂವಿಧಾನವನ್ನು ಉಳಿಸುವ ಮಾತನಾಡುವ ಕಾಂಗ್ರೆಸ್‌ನವರು ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್‌ಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಮತ್ತೊಂದು ಕಡೆ ಎಲ್ಲ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿದ್ದಾರೆ. ಇದರಿಂದಾಗಿ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ನೈತಿಕತೆಯನ್ನು ಕಳೆದುಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ನೂರೊಂದು ಶೆಟ್ಟಿ, ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು, ಅರಕಲವಾಡಿ ನಾಗೇಂದ್ರ, ಹೊನ್ನೂರು ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್, ನಟರಾಜ್, ಜಯಸುಂದರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೂರ್ಯಕುಮಾರ್, ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net