

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾ.18ರಂದು 108 ಅಡಿ ಎತ್ತರದ ಮಹದೇಶ್ವರರ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಿದಾಗ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಎಚ್ಚರಿಕೆ ನೀಡಿದರು.
ಜಿಲ್ಲೆಗೆ ಈ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾಗ ರೈತ ಸಂಘ ಮನವಿ ಸಲ್ಲಿಸಿತ್ತು. ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಕೋರಿತ್ತು. ಆದರೂ ಬಗೆಹರಿಸಿಲ್ಲ. ಇದನ್ನು ಖಂಡಿಸಿ ಮಾ.18ರಂದು ಸಿಎಂ ಆಗಮಿಸಿದಾಗ ಪ್ರತಿರೋಧ ಒಡ್ಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿ ಹೇಳಿದರು. ಕಬ್ಬು ಮತ್ತು ಅರಿಶಿಣ ಬೆಳೆಗಳಿಗೆ ಬೆಂಬಲ ಬೆಲೆ ೋಷಿಸಿಲ್ಲ. ವಿದ್ಯುತ್ ಬಿಲ್ ಮನ್ನಾ ಮಾಡುವುದಾಗಿ ಭರವಸೆ ನೀಡಿ ಈಡೇರಿಸಲಿಲ್ಲ. ಮಲೆ ಮಹದೇಶ್ವರ ಬೆಟ್ಟದಲ್ಲಿ ಕುಡಿಯುವ ನೀರಿನ ಸೌಲಭ್ಯ ಒದಗಿಸಿಲ್ಲ. ಮೂಲಸೌಕರ್ಯ ಕಲ್ಪಿಸಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕೂಡ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೊಡ್ಡತುಪ್ಪೂರು ಶಶಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇದಕ್ಕಾಗಿ ಅನೇಕ ಸಭೆ, ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ನಮಗೆ ಸ್ಪಂದಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ಹೆಗ್ಗೋಠಾರ ಶಿವಸ್ವಾಮಿ, ಪಟೇಲ್ ಶಿವಮೂರ್ತಿ, ನಾಗರಾಜು, ಮಹದೇವಪ್ರಸಾದ್, ಮಹೇಶ್ ಹಾಜರಿದ್ದರು.