ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಆಚರಿಸಿ

27raju7
Published on

ಚಾಮರಾಜನಗರ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಂಗಳವಾರ ನಗರದಲ್ಲಿ ಶಾಂತಿ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜೂ.29ರಂದು ನಡೆಯಲಿರುವ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಆಚರಿಸುವಂತೆ ಮನವಿ ಮಾಡಿದರು.

ತ್ಯಾಗದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಲಾಗುತ್ತಿದೆ. ಇದೇ ಪರಂಪರೆ ಜಿಲ್ಲೆಯಲ್ಲಿ ಮುಂದುವರಿಯಲಿ. ಹಬ್ಬಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುತ್ತದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು, ನೈರ್ಮಲ್ಯ, ವಿದ್ಯುತ್ ಸೇರಿದಂತೆ ಯಾವುದೇ ಸೌಕರ್ಯಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದೆಯೂ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗಿದೆ. ಎಲ್ಲಿಯೂ ಸೌಹಾರ್ದತೆಗೆ ಭಂಗ ಬಂದಿಲ್ಲ. ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈದ್ಗಾ ಮೈದಾನ ಸೇರಿದಂತೆ ಪ್ರಾರ್ಥನಾ ಮಂದಿರಗಳ ಬಳಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಕಾನೂನು ಸುವ್ಯವಸ್ಥೆಗೆ ಎಲ್ಲರ ಸಹಕಾರ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಯಾವುದೇ ಪ್ರಚೋದಾನಾತ್ಮಕ ಹೇಳಿಕೆಗಳಿಗೆ ಕಿವಿಗೊಡಬಾರದು. ವಿಶೇಷವಾಗಿ ಯುವಜನರಿಗೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಸಾಮರಸ್ಯದಿಂದ ಹಬ್ಬ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಸ್ಲಿಂ ಮುಖಂಡರು ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆ, ಸಾಮರಸ್ಯ ಕಾಪಾಡಿಕೊಂಡು ಹಬ್ಬ ಆಚರಿಸಲಿದ್ದೇವೆ ಎಂದರು. ತಹಸೀಲ್ದಾರ್ ಐ.ಇ. ಬಸವರಾಜು, ಮಂಜುಳಾ, ನಗರಸಭೆ ಆಯುಕ್ತ ಎಸ್.ವಿ. ರಾಮದಾಸ್, ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಂ. ರಾಜು, ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡರು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net