

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ತಂಬಾಕು ಮಾರಾಟ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ.
ಈ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಡಿಸಿ ಸಿ.ಟಿ.ಶಿಲ್ಪಾನಾಗ್ ಅಧಿಕಾರಿಗಳಿಗೆ ಕ್ರಮವಹಿಸಲು ಸೂಚನೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಅಕ್ರಮ ತಂಬಾಕು ಮಾರಾಟ ಜಾಸ್ತಿಯಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು. ಮಲೆ ಮಹದೇಶ್ವರ ಬೆಟ್ಟದಲ್ಲಿ ಹಲವಾರು ಪ್ರಕರಣಗಳು ಕಂಡು ಬಂದಿದೆ. ಪಟ್ಟಣ ಹಾಗೂ ಹಳ್ಳಿಗಳಲ್ಲಿ ತಂಬಾಕು ಮಾರಾಟ ಹಾಗೂ ಸೇವನೆಗಳ ಕುರಿತ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇತರ ಇಲಾಖೆಗಳು ಮುಂದಾಗಬೇಕು ಎಂದು ತಿಳಿಸಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಪಂ ಮಟ್ಟದಲ್ಲಿ ತಂಬಾಕು ಸೇವನೆಯಿಂದ ಆಗುವ ಅನಾಹುತಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಗ್ರಾಪಂ ಮಟ್ಟದಲ್ಲಿ ನಡೆಯುವ ಗ್ರಾಮಸಭೆ ಹಾಗೂ ಮಕ್ಕಳ ಗ್ರಾಮಸಭೆಗಳಲ್ಲಿ ತಂಬಾಕು ನಿಯಂತ್ರಣದ ಕುರಿತು ತಿಳಿಹೇಳಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿ ತಂಬಾಕು ನಿಯಂತ್ರಣಕ್ಕಾಗಿ ಶ್ರಮಿಸಬೇಕು ಎಂದರು.
ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳ, ಶಾಲಾ ಕಾಲೇಜು ಹಾಗೂ ಇನ್ನಿತರ ಸ್ಥಳಗಳಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಭಿತ್ತಿ ಪತ್ರಗಳನ್ನು ಅಂಟಿಸಬೇಕು. ಶಾಲಾ ಮಟ್ಟದಲ್ಲಿ 13 ರಿಂದ 18 ವರ್ಷದ ಮಕ್ಕಳಿಗೆ ತಂಬಾಕು ಸೇವನೆಯಿಂದ ಆರೋಗ್ಯದಲ್ಲಿ ಉಂಟಾಗುವ ಬದಲಾವಣೆಗಳ ಬಗ್ಗೆ ತಿಳಿಸಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ತಂಬಾಕಿನ ನಿಷೇಧದ ಬಗ್ಗೆ ಅರಿವು ಮೂಡಿಸಬೇಕು. ಯುವ ಜನತೆಯು ಭವಿಷ್ಯತ್ತಿನಲ್ಲಿ ತಂಬಾಕು ಸೇವನೆಗಳಿಗೆ ಒಳಗಾಗದಂತೆ ಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು. ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ನಗರಸಭೆ ಆಯುಕ್ತ ರಾಮದಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಧಾ ಹಾಗೂ ಇತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾ.ಪಂ ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿಯೂ ಸಹ ಗ್ರಾಮ ಪಂಚಾಯಿತಿಗಳನ್ನು ತಂಬಾಕಿನಿಂದ ಮುಕ್ತಗೊಳಿಸುವಲ್ಲಿ ಕಾರ್ಯ ಯೋಜನೆ ರೂಪಿಸಲಾಗುವುದು.ಸರಸ್ವತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಚಾಮರಾಜನಗರ