

ಚಾಮರಾಜನಗರ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯೋಜನೆ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಾಕೀತು ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಾರ್ಯಕ್ರಮಕ್ಕಾಗಿ ನಿಗದಿಯಾಗಿರುವ ಅನುದಾನ ಸದ್ಬಳಕೆಯಾಗಬೇಕು. ವಿಳಂಬ ಮಾಡದೇ ಯೋಜನೆ ಅನುಷ್ಠಾನಗೊಳಿಸಿ ಪರಿಶಿಷ್ಟರ ಅಭಿವೃದ್ಧಿಗೆ ಮುಂದಾಗಬೇಕು. ನಿಗದಿತ ಅವಧಿಯೊಳಗೆ ಸೌಲಭ್ಯಗಳು ತಲುಪಬೇಕು ಎಂದು ಸೂಚಿಸಿದರು.
ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು. ಯಾವುದೇ ರೀತಿಯ ದೂರುಗಳಿಗೆ ಅವಕಾಶವಾಗಬಾರದು. ಎಲ್ಲಿಯೂ ಗೊಂದಲಗಳಿಗೆ ಆಸ್ಪದ ನೀಡದಂತೆ ಸುಗಮವಾಗಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು, ಸವಲತ್ತುಗಳು ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ವಿವಿಧ ಯೋಜನೆಯಡಿ ನೀಡುವ ಸೌಲಭ್ಯ, ಪರಿಕರಗಳು ಗುಣಮಟ್ಟದಾಗಿರಬೇಕು. ಗಂಗಾಕಲ್ಯಾಣ ಯೋಜನೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇತರ ಇಲಾಖೆಗಳು ಸಮರ್ಪಕವಾಗಿ ಯೋಜನೆಯ ಕಾರ್ಯಕ್ರಮಗಳನ್ನು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.