ಪೈಪ್‌ಲೈನ್ ಸ್ಥಳಾಂತರಕ್ಕೆ ಕ್ರಮವಹಿಸಿ

23raju5
Published on

ಚಾಮರಾಜನಗರ: ನಗರದ ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿ ಜಿಲ್ಲಾಡಳಿತ ಭವನದ ಮುಂಭಾಗ ಹಾದು ಹೋಗಿರುವ ರಾಜಕಾಲುವೆಗೆ ಅಡ್ಡಲಾಗಿರುವ ಪೈಪ್‌ಲೈನ್ ಸ್ಥಳಾಂತರ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ಜಿಲ್ಲಾಡಳಿತ ಭವನದ ಮುಂಭಾಗ ಹಾದುಹೋಗಿರುವ ರಾಜಕಾಲುವೆಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್ ಅಡ್ಡಲಾಗಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತಡೆಯಾಗಿ, ಮಳೆ ಬಂದಾಗ ಸಾಕಷ್ಟು ಸಮಸ್ಯೆಯಾಗುತ್ತಿತ್ತು. ಶುಕ್ರವಾರ ಮಧ್ಯಾಹ್ನ ಶಾಸಕ ಪುಟ್ಟರಂಗಶೆಟ್ಟಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕಾಲುವೆಯಲ್ಲಿ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್ ಅಡ್ಡಲಾಗಿರುವ ಕಾರಣದಿಂದ ಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದೆ ಜೋಡಿರಸ್ತೆ ಜಲಾವೃತವಾಗಿ, ಜನತೆಗೆ ತುಂಬ ತೊಂದರೆ ಉಂಟಾಗಿದೆ. ಕಾಲುವೆಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ತಡೆಯಾಗಿರುವ ಕಾವೇರಿ ಕುಡಿಯುವ ನೀರಿನ ಪೈಪ್‌ಲೈನ್ ಸ್ಥಳಾಂತರ ಮಾಡಲು ಶಾಸಕರ ಅನುದಾನದಲ್ಲಿ 11 ಲಕ್ಷ ರೂ. ಬಳಕೆ ಮಾಡಿಕೊಳ್ಳುವಂತೆ ಸ್ಥಳದಲ್ಲೇ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಪೌರಾಯುಕ್ತ ರಾಮದಾಸ್, ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ಸುಷ್ಮಾ, ಜೆಇ ಶಿವಶಂಕರ ಆರಾಧ್ಯ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net