

ಚಾಮರಾಜನಗರ : ಆಕ್ಸಿಜನ್ ದುರಂತದ ಬಗ್ಗೆ ಸರ್ಕಾರ ಮರು ತನಿಖೆಗೆ ಆದೇಶ ನೀಡಿದ್ದು, 36 ಸಂತ್ರಸ್ತರ ಕುಟುಂಬಗಳಿಗೆ ಶೀಘ್ರದಲ್ಲೇ ಸರ್ಕಾರಿ ಉದ್ಯೋಗ ಕಲ್ಪಿಸಲಾಗುವುದು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.
ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಕೆಪಿಸಿಸಿ ವತಿಯಿಂದ ತಲಾ 1 ಲಕ್ಷ ರೂ. ಹಾಗೂ ನಾನು ವೈಯಕ್ತಿಕವಾಗಿಯೂ ಪರಿಹಾರ ನೀಡಿದ್ದೇನೆ. ದುರಂತದ ಸಂದರ್ಭದಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸಂತ್ರಸ್ತ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಸೂಕ್ತ ಪರಿಹಾರ ಕೊಡಿಸಲು ಕ್ರಮ ವಹಿಸಲಾಗುವುದು ಎಂದರು.
ಚಾ.ನಗರ ಪಟ್ಟಣ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆದ್ಯತೆ ನೀಡುತ್ತೇನೆ. ಸಂತೇಮರಹಳ್ಳಿ ರಸ್ತೆಯಲ್ಲಿರುವ ರೇಷ್ಮೆ ಇಲಾಖೆಗೆ ಸೇರಿದ 3.20 ಎಕರೆ ಜಾಗದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು. ಈಗಾಗಲೇ ಈ ಜಾಗವನ್ನು ಕೆಎಸ್‌ಆರ್‌ಟಿಸಿಗೆ ವರ್ಗಾಯಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಅವೈಜ್ಞಾನಿಕವಾಗಿದೆ. ಅನುದಾನಕ್ಕಾಗಿ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ. ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಅನೇಕರು ಕಟ್ಟಡಗಳನ್ನು ತೆರವುಗೊಳಿಸದೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದು ಜಿಲ್ಲಾಧಿಕಾರಿ ವ್ಯಾಪ್ತಿಗೆ ಬರುವುದರಿಂದ ಈ ಸಂಬಂಧ ಚರ್ಚಿಸಿ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮವಹಿಸುತ್ತೇನೆ. ಎಚ್.ಎಸ್.ಮಹದೇವಪ್ರಸಾದ್ ಹಾಗೂ ಆರ್.ಧ್ರುವನಾರಾಯಣ ಶ್ರಮದಿಂದ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ನೂತನ ವಿಶ್ವವಿದ್ಯಾಲಯ, ಕೃಷಿ ಕಾಲೇಜು, ಮಹಿಳಾ ಕಾಲೇಜು ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮತ್ತಷ್ಟು ಯೋಜನೆ ರೂಪಿಸಲಾಗುವುದು ಎಂದರು.
ಜಿಲ್ಲಾಸ್ಪತ್ರೆಯನ್ನು ಸಿಮ್ಸ್‌ನಿಂದ ಪ್ರತ್ಯೇಕಗೊಳಿಸಿ, ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ದೃಷ್ಟಿಯಿಂದ ಆರೋಗ್ಯ ಸಚಿವರ ಜತೆ ಚರ್ಚಿಸಲಾಗುವುದು. ಉಪ್ಪಾರ ಸಮುದಾಯದಲ್ಲಿ ಬಾಲ್ಯ ವಿವಾಹ ಇಂದಿಗೂ ಜೀವಂತವಾಗಿದ್ದು, ಇದಕ್ಕೆ ಕಡಿವಾಣ ಹಾಕಲಾಗುವುದು. ಉಪ್ಪಾರ ಜನಾಂಗವನ್ನು ಎಸ್ಟಿಗೆ ಸೇರಿಸುವ ನಿಟ್ಟಿನಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ಇದನ್ನು ಕೇಂದ್ರಕ್ಕೆ ಶಿಫಾರಸು ಮಾಡಿಸಲು ಕ್ರಮವಹಿಸಲಾಗುವುದು ಎಂದರು.
ಸಂವಾದದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದೇವರಾಜ್ ಕಪ್ಪಸೋಗೆ, ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್ ಹಾಜರಿದ್ದರು.
ಸುಮಾರು 18 ಕೋಟಿ ರೂ. ಅನುದಾನ ಬಿಡುಗಡೆ :
ನಗರಸಭಾ ವ್ಯಾಪ್ತಿಯ 31 ವಾರ್ಡ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈಗಾಗಲೇ 18.60 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಅನುದಾನದಲ್ಲಿ 16 ಕೋಟಿ ರೂ.ಗಳನ್ನು ತಲಾ 50 ಲಕ್ಷದಂತೆ ಪ್ರತಿ ವಾರ್ಡ್‌ಗೂ ಹಂಚಿಕೆ ಮಾಡಲಾಗಿದೆ. ಟೆಂಡರ್ ಕರೆಯುವುದು ಬಾಕಿ ಇದ್ದು, ಪ್ರತಿಯೊಂದು ವಾರ್ಡ್‌ನಲ್ಲಿ ಮೂಲಸೌಕರ್ಯ ಸಮಸ್ಯೆ ಬಗೆಹರಿಸಲಾಗುವುದು ಎಂದು ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.
ಜಿಲ್ಲೆಗೆ ಮತ್ತೆ ಮುಖ್ಯಮಂತ್ರಿ:
ಜಿಲ್ಲಾ ಕೇಂದ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಕರೆತರಲಾಗುವುದು ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಗ್ರಂಥಾಲಯ, ವಸತಿ ಪ್ರಥಮದರ್ಜೆ ಕಾಲೇಜು, ಉಪ್ಪಾರ ಸಮುದಾಯ ಭವನ, ಹಾಗೂ ಇನ್ನಿತರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿ ಮತ್ತೊಮ್ಮೆ ಜಿಲ್ಲಾ ಕೇಂದ್ರಕ್ಕೆ ಕರೆತರಲಾಗುವುದು ಎಂದು ಭರವಸೆ ನೀಡಿದರು.