

ಚಾಮರಾಜನಗರ: ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಶ್ರೀ ಮಲೈ ಮಹದೇಶ್ವರಸ್ವಾಮಿಯ 108 ಅಡಿ ಎತ್ತರದ ಪ್ರತಿಮೆ, ಬೆಳ್ಳಿರಥ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಮಾ.18ರಂದು ಬೆಳಗ್ಗೆ 10.30 ಗಂಟೆಗೆ ಮಹದೇಶ್ವರಬೆಟ್ಟದ ದೀಪದ ಗಿರಿ ಒಡ್ಡುವಿನಲ್ಲಿ ಆಯೋಜಿಸಲಾಗಿದೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮಿ, ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ ಭಾಗವಹಿಸುವರು. ಶ್ರೀಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ನೆರವೇರಿಸುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಉಪಸ್ಥಿತರಿರುವರು.
ಕಂದಾಯ ಸಚಿವ ಆರ್.ಅಶೋಕ್, ಲೋಕೋಪಯೋಗಿ ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಶಾಸಕ ಆರ್.ನರೇಂದ್ರ ಅಧ್ಯಕ್ಷತೆ ವಹಿಸಲಿದ್ದು, ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎನ್.ಮಹೇಶ್, ಶಾಸಕ ಸಿ.ಎಸ್. ನಿರಂಜನಕುಮಾರ್, ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ನಿಜಗುಣರಾಜು, ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.