

ಚಾಮರಾಜನಗರ: ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಬೇಕಾಗಿದೆ ಎಂದು ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗ ಮುಖ್ಯಸ್ಥ ಟಿ.ಮಾಂತೇಶ್ ತಿಳಿಸಿದರು.
ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಕರ್ನಾಟಕ ಏಕೀಕರಣ ಚಳುವಳಿ ಮಹತ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಏಕೀಕರಣ ಸಮಯದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಉಳಿವಿಗಾಗಿ ಹಲವರು ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿದಾಗ ಮಾತ್ರ ಕನ್ನಡ ಭಾಷೆ ಉಳಿಯುವುದು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಇತಿಹಾಸ ವಿಭಾಗ ಮುಖ್ಯಸ್ಥ ಡಾ.ಬಿ.ಆರ್.ಜಯಣ್ಣ ಮಾತನಾಡಿ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ನ್ಯಾಕ್ ನಿಂದ ಬೀ ಗ್ರೇಡ್ ಮಾನ್ಯತೆ ದೊರಕಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹೊರಚೆಲ್ಲಲು ಹಾಗೂ ಶೈಕ್ಷಣಿಕ ಯಶಸ್ಸಿಗೆ ಅನುಕೂಲವಾಗಲು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಪ್ರಭಾವತಿ, ಐಕ್ಯೂಎಸಿ ಸಂಚಾಲಕ ಪಿ.ಬಾಲಸುಬ್ರಮಣ್ಯಂ, ಉಪನ್ಯಾಸಕ ಎಂ.ರೋಹಿತ್, ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಚಂದ್ರಶೇಖರ್ ಹಾಗೂ ಇತರರು ಹಾಜರಿದ್ದರು.