

ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ಹಿಂದು ಕಾರ್ಯಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಭೇಂದ್ರಪ್ಪ ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಎನ್‌ಸಿಆರ್‌ಬಿ ವರದಿಯಂತೆ ರಾಜ್ಯದಲ್ಲಿ ಆರ್ಥಿಕ ಅಪರಾಧಗಳ ಸಂಖ್ಯೆ 1,80,742 ಕ್ಕೇರಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರ ಮೇಲಿನ ಅಪರಾಧಗಳಲ್ಲಿ ಕೂಡ ಗಮನಾರ್ಹ ಏರಿಕೆಯಾಗಿದ್ದು, ಕಾಂಗ್ರೆಸ ಸರ್ಕಾರವು ಹಿರಿಯ ನಾಗರಿಕರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ದೇಶದ್ರೋಹಿಗಳಿಗೆ, ಭಯೋತ್ಪಾದಕರಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದೂರಿದರು.
ಈ ಹಿಂದೆ ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಭೀತಿ ಮೂಡಿಸಿತ್ತು. ಹಾವೇರಿ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ನಡೆದ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ವಿಧಾನಸೌಧದಲ್ಲಿ ಕಾಂಗ್ರೆಸ್ಸಿನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಕೃತ್ಯವಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ಪ್ರಕರಣ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯ ಉಗ್ರರ ಅಡಗುತಾಣವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು.
ನಿಕಟಪೂರ್ವ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಮಾತನಾಡಿ, ಸಚಿವ ಪ್ರಿಯಾಂಕ ಖರ್ಗೆ ಪೊಲೀಸ್ ತನಿಖೆಗಿಂತಲೂ ಮೊದಲೇ ದೇಶವಿರೋಧಿ ಘೋಷಣೆ ಕೂಗಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲೂ ಜನರನ್ನು ದಿಕ್ಕು ತಪ್ಪಿಸುವಂತೆ ಹೇಳಿಕೆಗಳನ್ನು ನೀಡಿದ್ದರು. ಕಾಂಗ್ರೆಸ್ ಸರ್ಕಾರ ಸಮಾಜಘಾತುಕ ಶಕ್ತಿಗಳಿಗೆ ಬೆಂಬಲ ನೀಡುತ್ತಿದೆ. ಇದನ್ನು ನಾವು ಜನಸಾಮಾನ್ಯರ ಗಮನಕ್ಕೆ ತಂದು ನಿರಂತರವಾಗಿ ಇವರ ವಿರುದ್ಧ ಹೋರಾಟ ನಡೆಸುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಸಹ ವಕ್ತಾರ ಮಂಜುನಾಥ್, ವಿರೇಂದ್ರ ಹಾಜರಿದ್ದರು.