

ಚಾಮರಾಜನಗರ: ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಮತ್ತು ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಶನಿವಾರ ಮತಯಾಚನೆ ಮಾಡಿದರು.
ತಾಲೂಕಿನ ಕೂಡ್ಲೂರು, ಮಾದಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮದೇವತೆಗೆ ಪೂಜೆ ಸಲ್ಲಿಸಿ ನಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್‌ಬೋಸ್ ಪರ ಮತಯಾಚನೆ ಮಾಡಿದರು.
ನಂತರ ಮಾತನಾಡಿದ ಅವರು, ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್. ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿರುವಂತಹ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಯಾವಾಗಲೂ ಜನಪರವಾಗಿ, ಬಡವರ ಪರವಾಗಿರುವ ಪಕ್ಷವಾಗಿದೆ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
ದೇಶದಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರಲ್ಲಿದ್ದ ಸಂದರ್ಭದಲ್ಲಿ ಜನಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ದೀನ ದಲಿತರ, ಬಡವರ, ಸಾಮಾನ್ಯ ಜನರ ಪರವಾಗಿ ಕೆಲಸ ಮಾಡಿದಂತಹ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಸುನಿಲ್ ಬೋಸ್ ಅವರಿಗೆ ಅತ್ಯಧಿಕ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್‌ಅಸ್ಗರ್, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ.ಮಹದೇವಶೆಟ್ಟಿ, ಮಾದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರೂಪೇಶ್ ಮತ್ತು ಇತರರು ಹಾಜರಿದ್ದರು.