ಮತದಾನ ಜಾಗೃತಿಗಾಗಿ ಬೈಕ್ ರ‌್ಯಾಲಿ

1712407023198
Published on

ಚಾಮರಾಜನಗರ: ಲೋಕಸಭಾ ಚುನಾವಣೆಯ ಅಂಗವಾಗಿ ಮತದಾನದ ಮಹತ್ವ ಕುರಿತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‌್ಯಾಲಿ ಎಲ್ಲರ ಗಮನ ಸೆಳೆಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯೂ ಆದ ಶಿಲ್ಪಾನಾಗ್ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರ ಗಣ್ಯರು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಮತದಾನ ಜಾಗೃತಿಯ ಬಲೂನ್‌ಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಬೈಕ್ ಜಾಥಾವನ್ನು ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಪ್ರತಿಯೊಬ್ಬರಲ್ಲೂ ಮತದಾನದ ಜಾಗೃತಿ ಮೂಡಿಸಲು ಬೈಕ್ ಜಾಥಾ ಹಮ್ಮಿಕೊಳ್ಳಲಾಗಿದೆ. ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುವ ಹಬ್ಬವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಎಲ್ಲ ಅರ್ಹ ಮತದಾರರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಲೋಕಸಭಾ ಚುನಾವಣೆಯ ಮತದಾನವು ಏ.26ರಂದು ನಡೆಯಲಿದ್ದು, ಈ ಬಾರಿ ಮೊದಲ ಸಲ ಮತದಾನ ಮಾಡುವ 18 ವರ್ಷ ತುಂಬಿದ ಯುವ ಮತದಾರರು ತಪ್ಪದೆ ಮತ ಚಲಾಯಿಸಬೇಕು. ಮತದಾನದ ಪಾಮುಖ್ಯ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವಂತೆ ಇತರರಿಗೂ ತಿಳಿಹೇಳಬೇಕು ಎಂದು ತಿಳಿಸಿದರು.

ಬಳಿಕ ನೂರಾರು ಬೈಕ್‌ಗಳಲ್ಲಿ ಸಮಾವೇಶಗೊಂಡಿದ್ದ ಜಾಥಾಗೆ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಲಕ್ಷ್ಮೀ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಎಸ್ಪಿ ಪದ್ಮಿನಿ ಸಾಹು ಬೈಕ್ ಚಲಾಯಿಸಿದ್ದು ಜಾಥಾದ ವಿಶೇಷವಾಗಿತ್ತು.

ಜಿಲ್ಲಾ ಕ್ರೀಡಾಂಗಣದಿಂದ ಹೊರಟ ಬೈಕ್ ಜಾಥಾವು ನಗರದ ಎಲ್‌ಐಸಿ ವೃತ್ತ, ಸಂತೇಮಹಳ್ಳಿ ವೃತ್ತ, ಪಚ್ಚಪ್ಪ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರ ಮೂಲಕ ಸಾಗಿ ಬಳಿಕ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಗುಂಡ್ಲುಪೇಟೆ ಸರ್ಕಲ್ ಮಾರ್ಗವಾಗಿ ಅಂತಿಮವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ತಲುಪಿತು. ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದ ನೂರಾರು ಅಧಿಕಾರಿಗಳು, ಇತರರು ಮತದಾನ ಅರಿವು ನಾಮಫಲಕಗಳನ್ನು ಹಿಡಿದು ಚುನಾವಣಾ ಪರ್ವ-ದೇಶದ ಗರ್ವ ಘೋಷಣೆಗಳನ್ನು ಕೂಗಿ ಜನಜಾಗೃತಿ ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net