

ಚಾಮರಾಜನಗರ: ಹನೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹನೂರು ಪಟ್ಟಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಸಾರ್ವಜನಿಕರಿಗೆ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಚುನಾವಣಾ ಪರ್ವ-ದೇಶದ ಗರ್ವ ಘೋಷವಾಕ್ಯದೊಂದಿಗೆ ಮಂಗಳವಾರ ಮೊಂಬತ್ತಿ ಮೆರವಣಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಯುವ ಮತದಾರರು ಮತದಾನದಿಂದ ವಂಚಿತರಾಗಬಾರದು. ಯಾವುದೇ ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತವಾಗಿ ಮತ ಚಲಾಯಿಸಬೇಕು ಎಂದು ಹೇಳಿದರು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ರವೀಂದ್ರ ಮತದಾನ ಪ್ರತಿಜ್ಞಾವಿಧಿ ಬೋಧಿಸಿದರು. ಬಳಿಕ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಗಮನ ಸೆಳೆದರು. ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಮಹೇಶ್, ತಾಲೂಕು ಪಂಚಾಯಿತಿ ಅಧಿಕಾರಿಗಳು ಮತ್ತು ಎನ್‌ಆರ್‌ಎಲ್‌ಎಂ ಸಂಘದ ಸದಸ್ಯರು ಭಾಗವಹಿಸಿದ್ದರು.