ತಿ.ನರಸೀಪುರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಿ

17rajesh3
Published on

ಚಾಮರಾಜನಗರ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತಿ.ನರಸೀಪುರದಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕು ಎಂದು ಚುನಾವಣೆಯ ನೂತನ ಸಾಮಾನ್ಯ ವೀಕ್ಷಕ ಪಾರ್ಥಗುಪ್ತ ಸೂಚನೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಪೂರ್ವಸಿದ್ಧತೆ ಕುರಿತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2019ರ ಲೋಕಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡಾವಾರು ಮತದಾನ ಪ್ರಮಾಣ ಕಡಿಮೆ ಇತ್ತು. ಈ ಹಿನ್ನೆಲೆಯಲ್ಲಿ ಆಯಾ ಮತಗಟ್ಟೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚಿಸಿದರು.
ಮತಗಟ್ಟೆ ಸ್ಥಳ, ಸಂಖ್ಯೆಗನುಗುಣವಾಗಿ ಸಾರಿಗೆ ಸಂಪರ್ಕ ಹಾಗೂ ಮೂಲಸೌಕರ್ಯ ಸಮರ್ಪಕವಾಗಿರಬೇಕು. ಮತದಾನ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಸಮರ್ಪಕವಾಗಿರುವ ಬಗ್ಗೆ ಹಾಗೂ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಚುನಾವಣಾಧಿಕಾರಿ ಶಿಲ್ಪಾನಾಗ್, ಸಹಾಯಕ ಚುನಾವಣಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪಿ.ಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net