

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಉದ್ದೇಶದಿಂದ ಜು.8 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ನ್ಯಾಯಾಧೀಶೆ ಬಿ.ಎಸ್.ಭಾರತಿ ಮಾಹಿತಿ ನೀಡಿದರು.
ಜಿಲ್ಲಾ ಮತ್ತು ತಾಲೂಕುಗಳ ನ್ಯಾಯಾಲಯಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಅದಾಲತ್ ನಡೆಯಲಿದೆ. ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಉದ್ದೇಶದಿಂದ ಮೆಗಾ ಲೋಕ ಅದಾಲತ್ ಆಯೋಜಿಸಿದ್ದು, ಸುಮಾರು 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ನ್ಯಾಯಾಲಯಗಳಲ್ಲಿ ೆ.11 ರಂದು ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 11,975 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಎಲ್ಲ ರಾಜಿಗೆ ಯೋಗ್ಯವಾದ ಪ್ರಕರಣಗಳನ್ನು ಈಗಾಗಲೇ ಸಂಧಾನಕ್ಕೆ ತೆಗೆದುಕೊಂಡಿದ್ದು, ಪೂರ್ವಭಾವಿ ಸಮಾಲೋಚನೆ ನಡೆಸಲಾಗುತ್ತಿದೆ. ಲೋಕ ಅದಾಲತ್ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಮಾ ಕಂಪನಿಗಳು, ಭೂಸ್ವಾಧೀನಾಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್ ಇಲಾಖೆ, ನ್ಯಾಯಾಧೀಶರು ಮತ್ತು ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಹಾಗೂ ಇತರ ಅಧಿಕಾರಿಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿಕೊಳ್ಳಲು ಇದು ಉತ್ತಮ ಅವಕಾಶ. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಎಂದರು.
ಜಿಲ್ಲಾ ನ್ಯಾಯಲಯಗಳಲ್ಲಿ ಜು.8 ರಂದು ನಡೆಯುವ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿ, ಬ್ಯಾಂಕ್ ವಸೂಲಾತಿ, ಉದ್ಯೋಗ ಮರು ಸ್ಥಾಪನೆ, ಕಾರ್ಮಿಕರ ವೇತನಕ್ಕೆ ಸಂಬಂಧಸಿದ ಪ್ರಕರಣ, ರಿಯಲ್ ಎಸ್ಟೇಟ್, ಗ್ರಾಹಕರ ವೇದಿಕೆ, ಚೆಕ್ ಅಮಾನ್ಯ, ವಾಹನ ಅಪಘಾತ, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಭತ್ಯೆ, ಪಿಂಚಣಿ, ಸಾರ್ವಜನಿಕ ಸೇವೆಗಳು, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಹಾಗೂ ಇತರ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.