

ಚಾಮರಾಜನಗರ: ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಜು. 11ರಂದು ನಗರದಲ್ಲಿ ರೈತ ಜಾಗೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು.
ನಗರದ ಪ್ರವಾಸಿಮಂದಿರದಲ್ಲಿ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಕಾರ್ಯಾಗಾರದ ಸ್ಥಳ ಇನ್ನೂ ನಿಗದಿಯಾಗಿಲ್ಲ. ಗೋಹತ್ಯೆ ನಿಷೇಧ ಸಾಧಕ-ಬಾಧಕಗಳು, ರೈತರಿಂದ ನೇರವಾಗಿ ರಾಗಿ, ಜೋಳ, ಸಿರಿಧಾನ್ಯ ಖರೀದಿ ಮಾಡಬೇಕು ಎಂಬ ಬಗ್ಗೆ ಚರ್ಚಿಸಿ ವರದಿಯನ್ನು ಸರ್ಕಾರಕ್ಕೆ ತಿಳಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಮುಂಗಾರು ವಿಫಲವಾಗಿದೆ. ಆದ್ದರಿಂದ ರೈತರಿಗೆ ಬೆಳೆ ನಷ್ಟದ ಪರಿಹಾರ ನೀಡಬೇಕು. ಕಂದಾಯ ಇಲಾಖೆ, ಕೃಷಿ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಿ ರೈತರಿಗೆ ಪರಿಹಾರ ನೀಡಬೇಕು. ನೂತನ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚುನಾಯಿತಿ ಪ್ರತಿನಿಧಿಗಳ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರು ಗಿರವಿ ಇಟ್ಟಿದ್ದ ಚಿನ್ನಾಭಾರಣಗಳನ್ನು ವಾಸಪ್ ಕೊಡುವಂತೆ ಒತ್ತಾಯಿಸಿ ಜು. 12 ಎಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಸಂಘದ ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ಜಿಲ್ಲಾ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು, ಉಪಾಧ್ಯಕ್ಷ ಹೆಗ್ಗೋಠಾರ ಶಿವಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ, ಅರಳೀಕಟ್ಟೆ ಗ್ರಾಮ ಘಟಕ ಅಧ್ಯಕ್ಷ ಕುಮಾರ್‌ಇತರರು ಇದ್ದರು.