

ಚಾಮರಾಜನಗರ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಹತ್ಯೆ ಹಾಗೂ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆ ವೈಫಲ್ಯ ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಕಮಲಮ್ಮ, ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಜಲಿ ಎಂಬ ಮತ್ತೊಂದು ಯುವತಿಯ ಕೊಲೆಯಾಗಿರುವುದು ತಲೆತಗ್ಗಿಸುವಂತಹ ಕೃತ್ಯವಾಗಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಸಾಲು ಕೊಲೆಗಳಾಗುತ್ತಿರುವುದು ಪೊಲೀಸರು ಮತ್ತು ರಾಜ್ಯ ಸರ್ಕಾರದ ನಡುವೆ ಸಮನ್ವಯತೆಯ ಕೊರತೆಯನ್ನು ಎತ್ತಿ ತೋರಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧೋಗತಿಗೆ ತಲುಪಿದೆ ಎಂದು ದೂರಿದರು.
ಅಂಜಲಿ ಕೊಲೆಯು ಅಮಾನುಷವಾದ ಹತ್ಯೆಯಾಗಿದೆ. ಆರೋಪಿಯು ಯುವತಿಯ ಮನೆಗೆ ನುಗ್ಗಿ ಕೊಲೆ ಮಾಡಿ ಹೋಗುತ್ತಾನೆ ಎಂದರೆ ಪೋಲಿಸ್ ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂಬುದನ್ನು ತೋರಿಸುತ್ತದೆ. ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಕೊಲೆಗಡುಕರ ಮೇಲೆ ನಿರ್ದಾಕ್ಷಿಣ್ಯ ಕ್ರಮವಹಿಸಬೇಕಿದೆ. ರಾಜ್ಯದ ಜನತೆ ನಿರ್ಭೀತಿಯಿಂದ ಜೀವನ ಸಾಗಿಸುವ ವಾತಾವರಣ ಸೃಷ್ಟಿ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಬೇಕಿದೆ. ಇದು ಹೀಗೆಯೇ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ.ಶೈಲಾ, ನಗರಸಭಾ ಸದಸ್ಯೆ ಮಮತಾ ಬಾಲಸುಬ್ರಹ್ಮಣ್ಯಂ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಯಶೀಲಾ ರಾಜಶೇಖರ್, ಉಪಾಧ್ಯಕ್ಷೆ ದಾಕ್ಷಾಯಿಣಿ ಇದ್ದರು.